

ಹಾವೇರಿ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಆರ್ಥಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿಶಾಲ ಆರ್. ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕಂದಾಯ, ವಿಪತ್ತು ನಿರ್ವಹಣೆ, ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯಕ್ರಮಗಳು, ಕುಡಿಯುವ ನೀರು, ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದರು.
ಬರುವ ಬೇಸಿಗೆ ಸಮಯದಲ್ಲಿ ನೀರು ಪೂರೈಕೆ ಅಗತ್ಯ ಜಲಮೂಲಗಳಿಂದ ನೀರಿನ ಸಂಗ್ರಹಣೆ ಮಾಡಿಕೊಳ್ಳಬೇಕು. ಜಿಲ್ಲೆಯ ಎಲ್ಲ ನಗರ, ಪಟ್ಟಣಗಳ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ನಗರದ ಕುಡಿಯುವ ನೀರಿನ ಮೂಲ, ಕೊಳವೆಬಾವಿಗಳ ವಿವರ, ಅಂತರ್ಜಲ ಮಟ್ಟಗಳ ವಿವರ, ದುರಸ್ತಿಯಲ್ಲಿರುವ ಹಾಗೂ ಸುಸ್ಥಿತಿಯಲ್ಲಿರುವ ಕೊಳವೆಬಾವಿಗಳ ಮಾಹಿತಿಯನ್ನು ಸಂಗ್ರಹಿಸಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ಪರ್ಯಾಯ ನೀರಿನ ಲಭ್ಯತೆ, ಮೂಲಗಳನ್ನು ಗುರುತು ಮಾಡಿಕೊಂಡು ಅಗತ್ಯ ಬಿದ್ದಾಗ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ತಾಕೀತು ಮಾಡಿದರು.
ಜಾನುವಾರುಗಳಿಗೆ ಅಗತ್ಯ ಲಸಿಕೆಗಳನ್ನು ಸಕಾಲದಲ್ಲಿ ನೀಡಬೇಕು ಹಾಗೂ ಕುಡಿಯುವ ನೀರಿನ ಜತೆಗೆ ಜಾನುವಾರುಗಳಿಗೆ ಮೇವಿನ ಸಂಗ್ರಹಣೆ ಬಗ್ಗೆ ಗಮನಹರಿಸಬೇಕು. ನೀರಾವರಿ ಹೊಂದಿದ ರೈತರಿಗೆ ಅಗತ್ಯ ಮೇವಿನ ಬೀಜದ ಕಿಟ್ ನೀಡಬೇಕು ಎಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಆರ್.ವಿಶಾಲ ಸೂಚಿಸಿದರು.
ಎಪ್ರಿಲ್-ಮೇನಲ್ಲಿ ಅಧಿಕ ಬಿಸಿಲಿನಿಂದ ಉಂಟಾಗುವ ಹೀಟ್ ಸ್ಟ್ರೋಕ್‌ಗೆ ಚಿಕಿತ್ಸೆ ನೀಡಲು ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಲಾಯನ್ ಸಂಗ್ರಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹೇಳಿದರು. ಮೂರರಿಂದ ಆರು ತಿಂಗಳ ಅವಧಿಯ ಕೋರ್ಟ್ ಕೇಸ್‌ಗಳನ್ನು ತಹಸೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆದ್ಯತೆ ಮೇರೆಗೆ ಇತ್ಯರ್ಥಗೊಳಿಸಬೇಕು. ಆರ್.ಟಿ.ಸಿ. ಮ್ಯೂಟೇಷನ್ ಹಾಗೂ ಆರ್.ಟಿ.ಸಿ. ಕರೆಕ್ಷನ್ ತ್ವರಿತವಾಗಿ ಕಾಲಮಿತಿಯೊಳಗೆ ವಿಲೇಗೊಳಿಸಬೇಕು ಹಾಗೂ ಭೂಮಾಪನ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ವಿಲೇಗೊಳಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಆರ್‌ಟಿಸಿಗೆ ಆಧಾರ್ ಜೋಡಣೆ ಬಹಳ ಕಡಿಮೆಯಾಗಿದ್ದು, ಆದ್ಯತೆ ಮೇರೆಗೆ ನೂರಕ್ಕೆ ನೂರರಷ್ಟು ಆಧಾರ್ ಜೋಡಣೆಗೆ ಕ್ರಮವಹಿಸಬೇಕು. ತೋಟಗಾರಿಕೆ, ಕೃಷಿ ಇಲಾಖೆ, ಮೀನುಗಾರಿಕೆ, ರೇಷ್ಮೆ , ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ, ಫಲಾನುಭವಿಗಳ ಆಯ್ಕೆ ಹಾಗೂ ಕಾರ್ಯಕ್ರಮ ಅನುಷ್ಠಾನವನ್ನು ಕಾಲಮಿತಿಯೊಳಗೆ ಮಾಡುವಂತೆ ಸೂಚಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ, ಕಳೆದ ಬೇಸಿಗೆಯಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಿಲ್ಲ. ಹೆಗ್ಗೇರಿ ಕೆರೆ ಹಾಗೂ ಬೋರವೆಲ್‌ಗಳ ಮೂಲಕ ನೀರು ಸರಬರಾಜು ಮಾಡಲಾಗಿದೆ. ನೀರಿನ ಕೊರತೆ ಇರುವುದಿಲ್ಲ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಉಪ ವಿಭಾಗಾಧಿಕಾರಿಗಳಾದ ಎಚ್.ಬಿ.ಚನ್ನಪ್ಪ ಹಾಗೂ ಮಹ್ಮದ ಖಿಜರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ವಿವಿಧ ತಾಲೂಕುಗಳ ತಹಸೀಲ್ದಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.