ಹಾವೇರಿ: ಜಿಲ್ಲೆಯ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಧಾರವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಾಲಾ ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮೇ 9ರಂದು ಬೆಳಗ್ಗೆ 10 ಗಂಟೆಗೆ ನಗರದ ಗೆಳೆಯರ ಬಳಗ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಸಂಗೀತ, ಚಿತ್ರಕಲೆ, ಕ್ಲೇಮಾಡೆಲಿಂಗ್‌ನಲ್ಲಿ 6ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಗುಂಪು ಸ್ಪರ್ಧೆಯಲ್ಲಿ ಜಾನಪದ ನೃತ್ಯ ಮತ್ತು ನಾಟಕ ಪ್ರದರ್ಶನ ಒಂದು ವಿಭಾಗ ಹಾಗೂ ಡೊಳ್ಳು ಕುಣಿತ ಮತ್ತು ಕಂಸಾಳೆ(ಸಂಗೀತ ವಾದ್ಯ ಪರಿಕರಿಗಳೊಂದಿಗೆ ಹಾಜರಾಗಬೇಕು) ಒಂದು ವಿಭಾಗವಾಗಿ ಮಾಡಲಾಗಿದೆ. ಈ ವಿಭಾಗಗಳಲ್ಲಿ 9ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು.
ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ಮಕ್ಕಳಿಗೂ ಪ್ರಮಾಣ ಪತ್ರ, ಊಟದ ವ್ಯವಸ್ಥೆ ಮಾಡಲಾಗಿದೆ. ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಜಿಲ್ಲೆಯ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.