ಅತ್ಯಾಚಾರ, ಕೊಲೆಗೆ ವಿದ್ಯಾರ್ಥಿಗಳ ಆಕ್ರೋಶ; ಕೋಲ್ಕತ್ತ ಮೆಡಿಕಲ್ ಕಾಲೇಜ್ ಪ್ರಕರಣ ಖಂಡಿಸಿ ಎಬಿವಿಪಿ, ಎಸ್‌ಎಫ್‌ಐ, ವೈದ್ಯರ ಪ್ರತಿಭಟನೆ

17 HVR 7 A
Published on

ಹಾವೇರಿ: ಕೋಲ್ಕತ್ತದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ನಗರದಲ್ಲಿ ಶನಿವಾರ ಎಬಿವಿಪಿ, ಎಸ್‌ಎಫ್‌ಐ, ರಾಜ್ಯ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (ಕೆಜಿಎಂಒಎ) ಹಾಗೂ ಮತ್ತಿತರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಯುವತಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಲಾಯಿತು.
ನಗರದ ಜಿಲ್ಲಾಸ್ಪತ್ರೆ ಆವರಣದಿಂದ ಆರಂಭಗೊಂಡ ಪ್ರತಿಭಟನಾ ರ‌್ಯಾಲಿ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ನಡೆಯಿತು. ನಂತರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಕೆಲಕಾಲ ವಾಹನಗಳ ಸಂಚಾರ ಬಂದ್ ಮಾಡಿದರು. ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜ್‌ನ ಸೆಮಿನಾರ್ ಹಾಲ್‌ನಲ್ಲಿ ವೈದ್ಯಕೀಯ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇದಕ್ಕೆ ಮೂಲ ಕಾರಣ ಅಲ್ಲಿನ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ. ಈ ಹಿಂದೆ ನಡೆದಿದ್ದ ಇಂತಹ ಹಲವು ಪ್ರಕರಣದ ಆರೋಪಿಗಳಿಗೆ ಮಮತಾ ಬ್ಯಾನರ್ಜಿ ಸರ್ಕಾರ ಕಠಿಣ ಶಿಕ್ಷೆ ವಿಧಿಸದೇ ನಿರ್ಲಕ್ಷೃ ವಿಧಿಸಿದ್ದೇ ಈ ಘಟನೆ ನಡೆಯಲು ಕಾರಣವಾಗಿದೆ. ಇಂತಹ ಹಲವು ಘಟನೆಗಳು ನಡೆಯುತ್ತಲೇ ಇವೆ. ಇಂತಹ ಕೃತ್ಯ ಎಸಗಿರುವವ ರಕ್ಕಷಿಸುವ ಕೆಲಸವನ್ನು ಆ ಸರ್ಕಾರ ಮಾಡುತ್ತಿದೆ. ಇಂತಹ ಘಟನೆಗಳನ್ನು ಎಂದಿಗೂ ಸಹಿಸುವುದಿಲ್ಲ. ಕೂಡಲೇ ಆರೋಪಿಗಳೆಲ್ಲರನ್ನೂ ಬಂಧಿಸಿ, ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜ್ಯ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಅಶೋಕ ಬೀಮನಹಳ್ಳಿ, ಡಾ.ಚನ್ನಬಸಯ್ಯ ವಿರಕ್ತಮಠ, ಡಾ.ಪ್ರಭಾಕರ ಕುಂದೂರ, ಡಾ.ನಿರಂಜನ ಬಣಕಾರ, ಎಬಿವಿಪಿ ಜಿಲ್ಲಾ ಸಂಚಾಲಕ ಅಭಿಷೇಕ ದೊಡ್ಡಮನಿ, ನಗರ ಕಾರ್ಯದರ್ಶಿ ನಾಗರಾಜ ಪುರವಂತಿಗೌಡ್ರ, ತಾಲೂಕು ಸಂಚಾಲಕ ನವೀನ ಜಿ.ಕೆ., ಮಾಧ್ಯಮ ಪ್ರಮುಖ ಸಂತೋಷ ಯೋಗೀಶ, ಎಸ್‌ಎಫ್‌ಐ ಸಹ ಕಾರ್ಯದರ್ಶಿ ಬಸವರಾಜ ಎಸ್., ಸೇರಿದಂತೆ ನೂರಾರು ವಿದ್ಯಾರ್ಥಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿ ಪಾಲ್ಗೊಂಡಿದ್ದರು.
ಕಠಿಣ ಕಾನೂನು ರಚಿಸಿ
ಸರ್ಕಾರಿ ಸಂಸ್ಥೆ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜ್‌ನಲ್ಲಿ ಘಟನೆ ನಡೆದಿದೆ. ಅಲ್ಲಿ ಸಿಸಿಟಿವಿ ಕ್ಯಾಮರಾಗಳಿಲ್ಲ, ಭದ್ರತಾ ಕ್ರಮಗಳಿಲ್ಲ. ಯಾರೂ ಹೊಣೆಗಾರರಲ್ಲ ಎಂದರೆ ಆ ರಾಜ್ಯದ ವ್ಯವಸ್ಥೆ ಎಲ್ಲಿಗೆ ತಲುಪಿದೆ. ಆರಂಭದಲ್ಲಿ ಇದು ಆತ್ಮಹತ್ಯೆ ಎಂದು ತಪ್ಪು ದಾರಿಗೆ ಎಳೆಯುವ ಯತ್ನ ನಡೆಯಿತು. ವಿದ್ಯಾರ್ಥಿಗಳ ಪ್ರತಿಭಟನೆ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ದೇಶದಲ್ಲಿ ಎಲ್ಲಿಯೂ ಇಂತಹ ಘೋರ ಘಟನೆಗಳು ಜರುಗದಂತೆ ಸರ್ಕಾರ ಸೂಕ್ತ ಕ್ರಮ, ಕಾನೂನು ಜಾರಿಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net