ಸಿಎಂ ವಿರುದ್ಧ ತಮಟೆ ಚಳವಳಿ 19ರಂದು

17 DS Malagi
Published on

ಹಾವೇರಿ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರ ನಡೆ ಖಂಡಿಸಿ ಸೆ.19ರಂದು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಹೇಳಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಸಮಾಜದ ಪ್ರಮುಖ ಬೇಡಿಕೆಯಾಗಿದ್ದ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ ಜಾರಿಗೊಳಿಸಿ ಒಳ ಮೀಸಲಾತಿ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ತಮ್ಮ ಮಾತಿಗೆ ಬದ್ಧರಾಗಿಲ್ಲ. ದಲಿತ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಅನ್ಯಉದ್ದೇಶಕ್ಕೆ ಬಳಸುವ ಮೂಲಕ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರಕ್ಕೆ ಮಾದಿಗ ಸಮುದಾಯದ ಒಳಮೀಸಲಾತಿ ಕಲ್ಪಿಸಲು ಶಿಫಾರಸ್ಸು ಮಾಡಿದ್ದರು. ಈ ಕುರಿತು ಕೆಲವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಸುಪ್ರೀಂ ಕೋರ್ಟ್‌ನ 7 ಸದಸ್ಯರ ವಿಭಾಗೀಯ ಪೀಠ ಪರಿಶೀಲಿಸಿ, ಒಳಮೀಸಲಾತಿ ನೀಡುವುದು ರಾಜ್ಯ ಸರ್ಕಾರದ ಕೆಲಸ ಎಂದು ಆದೇಶಿಸಿದ್ದಾರೆ. ಆದರೆ ಈ ಆದೇಶ ನೀಡಿ ಒಂದು ತಿಂಗಳು ಗತಿಸಿದರೂ ಸಿಎಂ ಯಾವುದೇ ಕ್ರಮ ಜರುಗಿಸದೇ ಮೌನವಾಗಿದ್ದಾರೆ. ಹಾಗಾಗಿ, ಹಲಗೆ ಮತ್ತು ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದರು.
ಆಂಧ್ರಪ್ರದೇಶದಲ್ಲಿ ಈಗಾಗಲೇ ಜಾರಿ ಮಾಡಿರುವ ಮಾದರಿಯಲ್ಲಿ ಜನಸಂಖ್ಯೆ ಆಧರಿಸಿ ರಾಜ್ಯದಲ್ಲಿ ಶೇ.15ರಷ್ಟು ಮೀಸಲಾತಿ ಕಲ್ಪಿಸಬೇಕು. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಎ.ಜೆ.ಸದಾಶಿವ ಆಯೋಗ ರಚಿಸಿ 14 ಕೋಟಿ ರೂ. ಅನುದಾನ ನೀಡಿದ್ದರು. ಆದರೆ, ನಂತರದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯಾವುದೇ ಪ್ರಗತಿ ತೋರಲಿಲ್ಲ. ರಾಜ್ಯದ ಪ್ರತಿ ವಿಧನಸಭಾ ಕ್ಷೇತ್ರದಲ್ಲಿ ಸುಮಾರು 30 ಸಾವಿರ ಜನಸಂಖ್ಯೆ ಹೊಂದಿರುವ ಮಾದಿಗ, ಸಮಗಾರ, ಡೋಹರ ಮತ್ತು ಮಚಗಾರ ಸಮಾಜದ ಬೇಡಿಕೆಗಳನ್ನು ಪರಿಗಣಿಸಿ ಆಯೋಗದ ವರದಿಯನ್ನು ಯತಾವತ್ತಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಗವಿಸಿದ್ದಪ್ಪ ದ್ಯಾಮಣ್ಣನವರ, ಮಲ್ಲೇಶಪ್ಪ ಹರಿಜನ, ಅಶೋಕ ಮರೆಣ್ಣನವರ, ಉಡಚಪ್ಪ ಮಾಳಗಿ, ಸುಭಾಷ ಬೆಂಗಳೂರು, ಹೊನ್ನಪ್ಪ ತಗಡಿನಮನಿ, ನಾಗರಾಜ ಮಾಳಗಿ, ಕರಿಯಪ್ಪ ಕಟ್ಟಿಮನಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net