ಸೆ.26ಕ್ಕೆ ಡಿಸಿ ಕಚೇರಿಗೆ ರೈತರ ಮುತ್ತಿಗೆ; ಕುಲಾಂತರಿ ತಳಿ ಕುರಿತು ರೈತರೊಂದಿಗೆ ಚರ್ಚಿಸಲು ರೈತ ಸಂಘ ಆಗ್ರಹ

Raita Sangha Pressmeet
Published on

ಹಾವೇರಿ: ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಕುಲಾಂತರಿ ತಳಿ ಕುರಿತು ಸಭೆ ನಡೆಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಸೆ.26ರಂದು ಬೈಕ್ ರ್ಯಾಲಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಲಾಂತರಿ ತಳಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ತಿರಸ್ಕರಿಸಬೇಕು. ಬೆಳೆ ವಿಮಾ ತಾರತಮ್ಯ ಸರಿಪಡಿಸಿ, ಬೆಳೆಹಾನಿ ಪರಿಹಾರ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ಅತಿವೃಷ್ಠಿ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸಮರ್ಪಕವಾದ ಸಮೀಕ್ಷೆ ನಡೆಸುವಲ್ಲಿ ಜಿಲ್ಲಾಡಳಿತ ಹಿಂದೆ ಬಿದ್ದಿದೆ. ಕೆರೆ ತುಂಬಿಸುವ ಯೋಜನೆಗೆ ಸಾವಿರಾರು ಕೋಟಿ ವೆಚ್ಚ ಮಾಡಿ ಕೆರೆಗೆ ನೀರು ತುಂಬಿಸದಿದ್ದರೇ ಯೋಜನೆಯ ಉದ್ದೇಶವೇನು? ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತುಂಗಾ ಮೇಲ್ದಂಡೆ, ನೀರಾವರಿ ಯೋಜನೆ, ರೈಲ್ವೇ ಹಳಿ, ಹೀಗೆ ಹತ್ತಾರು ಅಭಿವೃದ್ಧಿ ಕಾರ್ಯಕ್ಕೆ ಭೂಮಿಯನ್ನು ಪಡೆದು ಹತ್ತಾರು ವರ್ಷ ಕಳೆದರೂ ಪರಿಹಾರ ನೀಡುವಲ್ಲಿ ಸರ್ಕಾರ ವಿಳಂಭ ಧೋರಣೆ ತೋರುತ್ತಿದೆ. ಇದರಿಂದ ಕೃಷಿಯನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿಗೆ ಬರುವಂತಾಗಿದೆ ಎಂದು ದೂರಿದರು.
2023-24ರ ಬೆಳೆ ವಿಮೆಯಲ್ಲಿ ಜಿಲ್ಲೆಯ ರೈತರಿಗೆ ಅನ್ಯಾಯವಾಗಿದೆ. ಅಸಮರ್ಪಕ ವಿಮಾ ನೀತಿಯಿಂದ ರೈತಕುಲ ನಲುಗಿದೆ. ಬರಗಾಲ ಅತಿವೃಷ್ಟಿಯಿಂದ ಬೆಳೆನಷ್ಟ ಅನುಭವಿಸುತ್ತಿದ್ದು ಬೆಳೆ ಪರಿಹಾರ ಕೊಡುವಲ್ಲಿ ಸರ್ಕಾರ ವಿಫಲವಾಗಿವೆ. ಯಾವ ಸರ್ಕಾರಗಳೂ ರೈತರ ಸಂಕಷ್ಟವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಪ್ರಸ್ತುತ ಸರ್ಕಾರ ಮುಡಾ ಹಗರಣ, ವಾಲ್ಮೀಕಿ ಹಗರಣ ಆರೋಪ ಪ್ರತ್ಯೋರೋಪ ಮಾಡುವಲ್ಲಿ ಕಾಲಹರಣ ಮಾಡುತ್ತಿದೆ. ಈ ರೈತ ವಿರೋಧಿ ನೀತಿಯನ್ನು ಖಂಡಿಸುತ್ತೇವೆ. ಹೆಸ್ಕಾಂ ಮೊದಲಿನಂತೆ ಬೋರ್‌ವೆಲ್ ಅರ್ಜಿ ಸ್ವೀಕರಿಸಬೇಕು. ಅಡಕೆ ಬೆಳೆವಿಮೆ ಬಿಡುಗಡೆ ಮಾಡಬೇಕು. ರೈತರ ಬೆಳೆಸಾಲ ಸಮಸ್ಯೆಗೆ ಒನ್ ಟೈಮ್ ಸೆಟಲ್‌ಮೆಂಟ್ ಮಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ಪ್ರಮುಖರಾದ ಶಿವಬಸಪ್ಪ ಗೋವಿ, ಎಚ್.ಎಚ್.ಮುಲ್ಲಾ, ಶಿವಯೋಗಿ ಹೊಸಗೌಡ್ರ, ಮಲ್ಲನಗೌಡ್ರ ಮಾಳಗಿ, ಯಶವಂತ ಎಡಗೋಡಿ, ಮಾಲತೇಶ ಪೂಜಾರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net