

ಹಾವೇರಿ: ಜಿಲ್ಲಾಡಳಿತದ ವತಿಯಿಂದ ಆ.15ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 7.45 ಗಂಟೆಗೆ ಎಲ್ಲ ಗಣ್ಯರು ಹಾಗೂ ಅಧಿಕಾರಿಗಳು ಹುತಾತ್ಮ ಮೈಲಾರ ಮಹಾದೇವ ವೃತ್ತದಲ್ಲಿ ಮೈಲಾರ ಮಹಾದೇವಪ್ಪನವರ ಪ್ರತಿಮೆಗೆ ಮಾರ್ಲಾಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡುವರು. ಬೆಳಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಂದ ಧ್ವಜಾರೋಹಣ, ಬೆಳಗ್ಗೆ 9.5ಕ್ಕೆ ಪಥ ಪರಿವೀಕ್ಷಣೆ, 9.15ಕ್ಕೆ ಪಥ ಸಂಚಲನ, 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ. 10 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಉಪಸ್ಥಿತರಿರುವರು. ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಂಸದ ಶಿವಕುಮಾರ ಉದಾಸಿ, ವಿಧಾನ ಪರಿಷತ್ ಶಾಸಕರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ ಭಾಗವಹಿಸಲಿದ್ದಾರೆ.