

ಹಾವೇರಿ: ಐದು ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಯ ಜನತೆಗೆ ರಾಜ್ಯ ಸರ್ಕಾರ ಒಟ್ಟು 2,336 ಕೋಟಿ ರೂ. ಖರ್ಚು ಮಾಡಿದೆ. ಬಡಜನರಿಗೆ ಇದರಿಂದ ಸಹಕಾರಿಯಾಗಿದೆ. ಶಕ್ತಿ ಯೋಜನೆ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಚಿಂತನೆ ನಡೆದಿದೆ ಎಂದು ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್ ಪಾಟೀಲ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಕಂದಾಯ ವಿಭಾಗದ 7 ಜಿಲ್ಲೆಗಳಲ್ಲಿ ಮತ್ತು ತಾಲೂಕುಗಳಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳಿಗೆ ಕಚೇರಿ ಆರಂಭಿಸಲಾಗಿದೆ. ಕಚೇರಿಗಳಿಗೆ ಬರುವ ಯೋಜನೆಯ ಫಲಾನುಭವಿಗಳ ಸಮಸ್ಯೆಗಳನ್ನು ಅಧಿಕಾರಿಗಳ ಸಮನ್ವಯದೊಂದಿಗೆ ಪರಿಹರಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಶಕ್ತಿ ಯೋಜನೆ ಆರಂಭವಾದಾಗಿನಿಂದ ಮಾರ್ಚ್ ಅಂತ್ಯದವರೆಗೆ ಒಟ್ಟು 10.86 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸಂಚರಿಸಿದ್ದಾರೆ. ಇದಕ್ಕಾಗಿ ಸರ್ಕಾರ 315.33 ಕೋಟಿ ರೂ. ಖರ್ಚು ಮಾಡಿದೆ. ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಕುರಿತು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಫಲಾನುಭವಿಗಳನ್ನು ಫಿಲ್ಟರ್ ಮಾಡುವ ಕುರಿತು ಈವರೆಗೆ ಸೂಚನೆ ಬಂದಿಲ್ಲ ಎಂದರು.
ಜಿಲ್ಲೆಯಲ್ಲಿ ಗೃಹಜೋತಿ ಯೋಜನೆಯಡಿ ಮಾರ್ಚ್ 2025ರವರೆಗೆ ಒಟ್ಟು 4 ಲಕ್ಷ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಎಲ್ಲ ಫಲಾನುಭವಿಗಳಿಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ಪೂರೈಸಲಾಗುತ್ತಿದೆ. ಇದಕ್ಕಾಗಿ ಸರ್ಕಾರ 217.51 ಕೋಟಿ ಖರ್ಚು ಮಾಡಿದೆ.
ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯಲ್ಲಿ ಮಾರ್ಚ್ 2025 ಅಂತ್ಯದವರೆಗೆ ಒಟ್ಟು 39,1,340 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 38,0446 ಫಲಾನುಭವಿಗಳಿಗೆ 760.89 ಕೋಟಿ ರೂ. ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 10,894 ಅರ್ಜಿಗಳು ಬಾಕಿ ಇವೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಮಾರ್ಚ್‌ವರೆಗೆ 36,3,888 ಕಾರ್ಡ್‌ಗಳು ನೋಂದಣಿಯಾಗಿದ್ದು, 327.63 ಕೋಟಿ ರೂ. ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಎಫ್‌ಎನ್ ಗಾಜಿಗೌಡ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಂ.ಎಂ ಹಿರೇಮಠ, ಜಿಲ್ಲಾ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಎಂ.ಎಂ ಮೈದೂರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗೆಣ್ಣಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಇತರರಿದ್ದರು.
ಯುವನಿಧಿಗೆ 8.89 ಕೋಟಿ
ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಮಾರ್ಚ್ 2025ರವರೆಗೆ ಒಟ್ಟು 7,113 ಅರ್ಜಿಗಳು ಸ್ವೀಕೃತವಾಗಿವೆ. ಅದರಲ್ಲಿ 5,103 ಫಲಾನುಭವಿಗಳಿಗೆ ಡಿಬಿಟಿ ಮೂಲಕ ಸರ್ಕಾರ 8.89 ಕೋಟಿ ರೂ. ವರ್ಗಾಯಿಸಿದೆ. 1,975 ಅರ್ಜಿಗಳು ಬಾಕಿ ಇದ್ದು, ಇವುಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು ಎಂದರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್ ಪಾಟೀಲ.