

ಹಾವೇರಿ: ದೈನಂದಿನ ಕೆಲಸದ ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಸಹಕಾರಿ ಆಗಲಿವೆ. ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ಆಯೋಜಿಸಿರುವ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದಿನದ 24 ತಾಸುಗಳಲ್ಲಿ ಎಂಟು ಗಂಟೆ ನಿದ್ದೆ, ಎಂಟು ಗಂಟೆ ಕೆಲಸ ಹಾಗೂ ಎಂಟು ಗಂಟೆ ಕ್ರೀಡೆ, ಇತರೆ ಚಟುವಟಿಕೆಗಳಿಗೆ ಮೀಸಲಿಡುವ ಮೂಲಕ ಉತ್ತಮ ಹಾಗೂ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಮಾನಸಿಕ ಉಲ್ಲಾಸ ಉಂಟಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಇತರರೊಂದಿಗೆ ಬೆರೆಯುವ ಅವಕಾಶ ಸಿಗುತ್ತದೆ. ಎಲ್ಲರೂ ಈ ಕ್ರೀಡಾಕೂಟದ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ದಿನಾಲೂ ವ್ಯಾಯಾಮ ಸೇರಿದಂತೆ ಆರೋಗ್ಯಕರ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಸೋಲು-ಗೆಲುವು ಸಾಮಾನ್ಯ, ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಮಾತನಾಡಿ, ಎಲ್ಲರೂ ಕ್ರೀಡಾ ಆಸಕ್ತಿ ಬೆಳೆಸಿಕೊಳ್ಳಬೇಕು. ಕಚೇರಿ ಕೆಲಸದೊಂದಿಗೆ ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ.ಎಚ್, ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲೇಶ ಕರಿಗಾರ, ಜಿಲ್ಲಾ ಘಟಕ ಪದಾಧಿಕಾರಿಗಳು, ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.