ಬೆಂಗಳೂರಿನಲ್ಲಿ 27ರಂದು ಸರ್ಕಾರಿ ನೌಕರರ ಮಹಾ ಸಮ್ಮೇಳನ; ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಮನವಿ

24 HVR 6
Published on

ಹಾವೇರಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. 27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ನೌಕರರ ಸಂಘದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಕ್ಕೋತ್ತಾಯ ಮಂಡಿಸಲಾಗುವುದು. ಕಾರಣ ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಮನವಿ ಮಾಡಿದರು.
ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಹಳೇ ಪಿಂಚಣಿ ಯೋಜನೆ ಮರು ಜಾರಿ, ಏಳನೇ ವೇತನ ಆಯೋಗದ ವರದಿ ಅನುಷ್ಠಾನ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ಲೋಕಾರ್ಪಣೆ ಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ರಾಜ್ಯದ ಎಲ್ಲ ಇಲಾಖೆಗಳ ವೃಂದ ಸಂಘಗಳ ಸಹಯೋಗದಲ್ಲಿ ಫೆ.27ರಂದು ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದಲ್ಲಿ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸುವರು. ಡಿಸಿಎಂ ಡಿ.ಕೆ.ಶಿವಕುಮಾರ, ಮತ್ತಿತರ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲೆಯಿಂದ ಸುಮಾರು 3 ಸಾವಿರ ನೌಕರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕಾಗಿ 30 ಬಸ್ ವ್ಯವಸ್ಥೆ ಮಾಡಲಾಗಿದ್ದು, ಆಯಾ ತಾಲೂಕುಗಳ ನೌಕರರು ತಾಲೂಕು ಕೇಂದ್ರದಲ್ಲಿ ಫೆ.26ರಂದು ರಾತ್ರಿ 9ಗಂಟೆಯೊಳಗಾಗಿ ಹಾಜರಿರಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎ.ಎಣ್ಣಿ, ಖಜಾಂಚಿ ಸಿದ್ದಣ್ಣ ಯಲಿಗಾರ, ಗೌರವಾಧ್ಯಕ್ಷ ಸಿ.ಜಿ. ಬ್ಯಾಡಗಿ, ಕಾರ್ಯಾಧ್ಯಕ್ಷ ವಾಚಪ್ಪ ಲಮಾಣಿ, ಎ.ಜಿ.ಶಶಿಧರ, ಇತರರಿದ್ದರು.
ಮಾ.9, 10ರಂದು ಕ್ರೀಡಾಕೂಟ
ಜಿಲ್ಲಾ ಘಟಕದ ವತಿಯಿಂದ ಮಾ.9 ಹಾಗೂ 10ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ನೌಕರರು ಕಡ್ಡಾಯವಾಗಿ ಮಾ.1ರೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಅಮೃತಗೌಡ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net