ಗ್ರಾಪಂ ನೌಕರರಿಂದ ಸಿಎಂ ಮನೆ ಚಲೋ ಫೆ.20ರಂದು

Published on

ಹಾವೇರಿ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ 31,000 ರೂ. ಜಾರಿಗೊಳಿಸುವುದು ಹಾಗೂ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಫೆ.20ರಂದು ಬೆಳಗಳೂರಿನಲ್ಲಿ ಮುಖ್ಯಮಂತ್ರಿ ಮನೆ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್‌, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಲು ಹಾಗೂ ಕನಿಷ್ಠ ವೇತನ 31,000 ನೀಡಲು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಸ್ವಚ್ಛವಾಹಿನಿ ನೌಕರರಿಗೆ ತರಬೇತಿ ಪಡೆದ ಎಲ್ಲರಿಗೂ ಉದ್ಯೋಗ ನೀಡಬೇಕು, ಒಡಂಬಡಿಕೆ ಮತ್ತು ವಾರ್ಷಿಕ ನವೀಕರಣ ರದ್ದು ಪಡಿಸಬೇಕು. 15ನೇ ಹಣಕಾಸಿನಲ್ಲಿ ವೇತನ ಪಾವತಿಸಬೇಕು, ಪ್ರತಿಯೊಂದು ಪಂಚಾಯಿತಿಗೆ ಒಬ್ಬ ಚಾಲಕರನ್ನು ಪರಿಗಣಿಸಿ 15,000 ರೂ. ನೀಡಬೇಕು. ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರ ಕುಟುಂಬದವರಿಗೆ ಪ್ರತಿ ತಿಂಗಳು ಕನಿಷ್ಠ 6,000 ರೂ. ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸಲು ಒತ್ತಾಯಿಸಲಾಗಿದೆ.

ಈ ಹೋರಾಟಕ್ಕೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ನೌಕರರು, ಸ್ವಚ್ಛವಾಹಿನಿ ನೌಕರರು ಪಾಲ್ಗೊಳ್ಳಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಅಂದಾನೆಪ್ಪ ಹೆಬಸೂರು, ಜಿಲ್ಲಾ ಪ್ರದಾನ ಕಾರ್ಯದರ್ಶಿ ಜಗದೀಶ ಕೋಟಿ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net