

ಹಾವೇರಿ: ಜಗಜ್ಯೋತಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಜಿಲ್ಲಾ ಗುರು ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ 889ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಹಡಪದ ಅಪ್ಪಣ್ಣನವರು ಸಾಮಾಜಿಕ ಅಸಮಾನತೆ, ಅಸ್ಪಶ್ಯತೆ, ಜಾತಿವ್ಯವಸ್ಥೆ, ಕಂದಾಚಾರ, ಮೂಡನಂಬಿಕೆ, ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣಿಯ ಎಂದರು.
ಸಮಾಜದಲ್ಲಿ ಹಿಂದುಳಿದ, ಶೋಷಣೆಗೊಳಗಾದ ಸಮಾಜವನ್ನು ಗುರುತಿಸಿ ಅಭಿವೃದ್ಧಿ ಹೊಂದಲು ಸಹಕಾರ ಮಾಡಬೇಕು. ಎಲ್ಲ ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದುರು.
ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಮಾಜದ ಜನರು ತಮ್ಮ ವೃತ್ತಿಯ ಜತೆಗೆ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿದರೆ, ಆ ಕುಟುಂಬಗಳು ಆರ್ಥಿಕ ಸುಧಾರಣೆಯಾಗಬಹುದು ಎಂದರು.
ಇದೇ ಸಂದರ್ಭದಲ್ಲಿ ಅಗ್ನಿ ಚಂಡು ಎಂಬ ಕಿರುಪುಸ್ತಕ ಬಿಡುಗಡೆ ಮಾಡಲಾಯಿತು. ಮಾಜಿ ಸೈನಿಕರು ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿವಶರಣ ಹಡಪದ ಅಪ್ಪಣ್ಣ ಅವರ ಜೀವನ ಕುರಿತು ನಿವೃತ್ತ ಶಿಕ್ಷಕ ಹನುಮಂತ ಗೌಡ ಗೊಲ್ಲರ ಉಪನ್ಯಾಸ ನೀಡಿದರು.
ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ಎಸ್.ಕೋರಿಶೆಟ್ಟರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಗೋಪಾಲ, ಜಿಲ್ಲಾ ಹಿಂದುಳಿದ ಕಲ್ಯಾಣಾಧಿಕಾರಿ ಪ್ರವೀಣ ಕೆ.ಎನ್., ಹಡಪದ ಅಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯ ಸಂಚಾಲಕ ಗುಡ್ಡಪ್ಪ ಮಲ್ಲೂರ, ಬಸವರಾಜ ಹಡಪದ, ಗಂಗಾಧರ ಎಮ್ಮಿಗನೂರ, ಸಿ.ಜಿ ಮಲ್ಲೂರ, ಸಮಾಜದ ಮುಖಂಡರು, ಸದಸ್ಯರು, ಇತರರು ಉಪಸ್ಥಿತರಿದ್ದರು.
10 ಲಕ್ಷ ರೂ. ದೇಣಿಗೆ :
ಸಮಾಜದ ಅಭಿವೃದ್ಧಿಗಾಗಿ ಸಭಾಪತಿ ಬಸವರಾಜ ಹೊರಟ್ಟಿ 10 ಲಕ್ಷ ರೂ. ದೇಣಿಗೆ ನೀಡಿದರು. ಮುಂದಿನ ದಿನಗಳಲ್ಲಿ ಸಮಾಜದ ನಿಗಮವನ್ನೂ ಸ್ಥಾಪಿಸಲಾಗುವುದಾಗಿ ತಿಳಿಸಿದರು.