

ಹಾವೇರಿ: ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ನೇತೃತ್ವದಲ್ಲಿ ಈ ಕೂಡಲೇ ಸಭೆ ಕರದು ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೆ.6ರಂದು ಜಿಲ್ಲಾಧಿಕಾರಿಯವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗ ಮತ್ತು ಪಂಗಡಗಳ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಕಳೆದ ಹತ್ತು, ಹದಿನೈದು ವರ್ಷಗಳಿಂದ ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿ, ಅಡುಗೆ ಸಹಾಯಕರು, ಕಾವಲುಗಾರು, ಸ್ವಚ್ಛತಾಗಾರರು, ಜವಾನರು, ನರ್ಸಗಳು, ಡಿ.ಗೂಪ್ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ, ಇವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಹಾಗಾಗಿ, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ 4 ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ಕರೆದು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಂಟಿ ಕಾರ್ಯದರ್ಶಿ ಹುಲಗಪ್ಪ ಚಲವಾದಿ, ಶಾಂತಾ ಶಿಗ್ಗಾಂವಿ, ಶೋಭಾ ಸಿ., ಬಸವರಾಜ ಎಸ್., ರಮೇಶ ಕೆ. ಇದ್ದರು.