ಹೊಯ್ಸಳ- ಕೆಳದಿ ಚೆನ್ನಮ್ಮ ಶೌರ್ಯ, ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಬಾಲಕರಿಗೆ ಹೊಯ್ಸಳ, ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷಗಳ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ತಮ್ಮ ಪ್ರಾಣದ ಹಂಗು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಹಾಗೂ ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತ ನೀಡಲಾಗುವುದು. 2022ರ ಆಗಸ್ಟ್ 1ರಿಂದ 2023ರ ಜುಲೈ 31ರ ನಡುವಿನ ಅವಧಿಯಲ್ಲಿ ನಡೆದ ಪ್ರಕರಣವನ್ನು ಪರಿಗಣಿಸಲಾಗುವುದು. 2005ರ ಆಗಸ್ಟ್ 1ರ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಆಯ್ಕೆಯಾದ ಮಕ್ಕಳಿಗೆ ತಲಾ 10 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷಗಳ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ತಲಾ 25 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಮತ್ತು ಸಂಸ್ಥೆಗಳಿಗೆ ಒಂದು ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಮಕ್ಕಳ ದಿನಾಚರಣೆ 2023ನೇ ಸಾಲಿನ ಪ್ರಶಸ್ತಿಗಾಗಿ ನಿಗದಿತ ಅರ್ಜಿ ನಮೂನೆಗಳನ್ನು ಹಾವೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬೇಕು. ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಸೆ.14ರ ಒಳಗಾಗಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net