

ಹಾವೇರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿರುವ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ಶ್ರೀ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಜೂ.30ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಏರ್ಪಡಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ. ಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹಾಗೂ ಉಪಸಭಾಪತಿ ರುದ್ರಪ್ಪ ಲಮಾಣಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿಸಲಿದ್ದಾರೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ವಿಪ ಮುಖ್ಯಸಚೇತಕ ಸಲೀಂ ಅಹ್ಮದ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ವಹಿಸಲಿದ್ದಾರೆ. ಶಾಸಕರಾದ ಶ್ರೀನಿವಾಸ ಮಾನೆ, ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ ಅಕ್ಷಯ ಶ್ರೀಧರ, ಎಸ್ಪಿ ಅಂಶುಕುಮಾರ, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಅಜ್ಜಮಾಡ ರಮೇಶ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ, ಕಾರ್ಯದರ್ಶಿಗಳಾದ ನಿಂಗಪ್ಪ ಚಾವಡಿ, ಮತ್ತೀಕೆರೆ ಜಯರಾಮ, ಸೋಮಶೇಖರ ಕೆರಗೋಡು, ಖಜಾಂಚಿ ವಾಸುದೇವ ಹೊಳ್ಳ ಭಾಗವಹಿಸಲಿದ್ದಾರೆ.
ಹಲವರಿಗೆ ಸನ್ಮಾನ :
ನಿವೃತ್ತ ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ ಅವರನ್ನು ಸನ್ಮಾನಿಸಲಾಗುವುದು. ದಿಲೀಪ ಕುರುಂದವಾಡಿ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾ ಭಾಷಣ ಮಾಡಲಿದ್ದಾರೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಸನ್ಮಾನಿಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಕುರುವತ್ತೇರ, ಪ್ರಧಾನ ಕಾರ್ಯದರ್ಶಿ ವೀರೇಶ ಮಡ್ಲೂರು, ರಾಜ್ಯ ಸಮಿತಿ ಸದಸ್ಯ ಪರಸಪ್ಪ ಸತ್ಯಪ್ಪನವರ ತಿಳಿಸಿದ್ದಾರೆ.