ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲರ ಸಹಕಾರ ಅಗತ್ಯ; ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್. ಹೇಳಿಕೆ

31 HVR 8
Published on

ಹಾವೇರಿ: ಮಾನವ ಕಳ್ಳ ಸಾಗಾಣಿಕೆ ಎಂಬುದು ಸಂಘಟಿತ ಅಪರಾಧವಾಗಿ ಸಮಾಜದಲ್ಲಿ ಹೆಮ್ಮರವಾಗಿ ಬೆಳೆಯುತ್ತಿದೆ. ಇದನ್ನು ತಡೆಗಟ್ಟಲು ಎಲ್ಲರ ಸಹಕಾರ ಅತ್ಯಗತವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವಿಂದ್ರಪ್ಪ ಎನ್. ಹೇಳಿದರು.

ಇಲ್ಲಿನ ಇಜಾರಿಲಕಮಾಪೂರದ ಸರ್ಕಾರಿ ಪದವಿಪೂರ್ವ ಮಹಿಳಾ ವಿದ್ಯಾಲಯದಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪದವಿಪೂರ್ವ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನ ಆಸೆಗೆ ಮಿತಿಯಿಲ್ಲ, ಮನುಷ್ಯ ತಾನು ಸುಖವಾಗಿರಲು ಎಲ್ಲ ಪಾಪ ಕೃತ್ಯಗಳನ್ನು ಮಾಡಲು ಹಿಂಜರಿಯುವುದಿಲ್ಲ. ಸಮಾಜದಲ್ಲಿ ಹಿಂದಿನಿಂದಲೂ ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ಹೆಣ್ಣು ಮಕ್ಕಳು, ಗಂಡು ಮಕ್ಕಳು ಹಾಗೂ ವೃದ್ದರು ಆಮಿಷಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು.

ಕಾನೂನು ನೆರವಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಬಹುದು ಹಾಗೂ ಎಲ್ಲರೂ ಇಂತಹ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್.ಡಿಳ್ಳೆಪ್ಪನವರ ಮಾನವ ಕಳ್ಳ ಸಾಗಾಣಿಕೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಎಸ್.ಎಚ್.ಮಜೀದ್ ಮಹಿಳೆಯರು ಮತ್ತು ಮಕ್ಕಳ ಸೌಲಭ್ಯಗಳ ಕುರಿತು ಉಪನ್ಯಾಸ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಅಧ್ಯಕ್ಷತೆ ವಹಿಸಿದ್ದರು. ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೈಲಜಾ ಎಚ್.ವಿ., ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸಿ.ಪಿ.ಜಾವಗಲ್ಲ, ಜಂಟಿ ಕಾರ್ಯದರ್ಶಿ ಎನ್.ಎನ್.ಕಾಳೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ, ಪ್ರಾಚಾರ್ಯ ಬಸವರಾಜ ಇಟ್ಟಿಗುಡಿ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net