ಓದಿನ ಜತೆಗೆ ಹಕ್ಕುಗಳನ್ನು ಅರಿಯಬೇಕು; ನ್ಯಾಯಾಧೀಶ ಪುಟ್ಟರಾಜು ಸಲಹೆ

18 HVR 2
Published on

ಹಾವೇರಿ: ವಿದ್ಯಾರ್ಥಿಗಳು ತಮ್ಮ ಓದಿನ ಜತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.
ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾನವ ಕಳ್ಳಸಾಗಾಣಿಕೆ ತಡೆ, ಪೋಕ್ಸೋ ಕಾಯ್ದೆ, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಕಾನೂನು ಉಲ್ಲಂಘನೆಯಾದಾಗ ಹಾಗೂ ಅಶಾಂತಿ ವಾತಾವರಣ ಉಂಟಾದಾಗ ವಿದ್ಯಾರ್ಥಿಗಳು ಕಾನೂನು ಪಾಲಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾಗಬೇಕು ಎಂದು ಸಲಹೆ ನೀಡಿದರು.
ಪೆನಲ್ ವಕೀಲೆ ರೆಹನಾ ಚನ್ನಪಟ್ಟಣ ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಹಾಗೂ ಉಪ ಕಾನೂನು ಅಧೀಕ್ಷಕರಾದ ಎಂ.ಸಿ ಭರಮಣ್ಣನವರ ಮಾನವ ಕಳ್ಳ ಸಾಗಾಣಿಕೆ ತಡೆ ಹಾಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯ ಡಾ.ಬಿ.ಎಂ ಬೇವಿನಮರದ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್ ಪಾಟೀಲ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಈಶ್ವರ ನಂದಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net