ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ

15 HVR 7
Published on

ಹಾವೇರಿ: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಗೇಟ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಯಷ್ಟು ಮಳೆ ಆಗಿಲ್ಲ. ಈಗಾಗಲೇ 236 ತಾಲೂಕುಗಳ ಪೈಕಿ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಉಳಿದಿರುವುದು ಕೇವಲ 20 ಟಿಎಂಸಿ ನೀರು. ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ. ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಶ್ಚರ್ಯಕರವಾಗಿದೆ.
ಬೆಂಗಳೂರಿಗೆ ಪ್ರತಿ ತಿಂಗಳು ಕುಡಿಯುವ ನೀರಿಗೇ ಒಂದೂವರೆ ಟಿಎಂಸಿ ನೀರು ಬೇಕು. ಕಾವೇರಿ ಕಣಿವೆಯ ರೈತರ ಹೊಲ ಗದ್ದೆಗಳಿಗೆ ನೀರಿಲ್ಲ. ಕೈಗಾರಿಕೆಗಳಿಗೆ ಕೊಡಬೇಕಾದ ನೀರಿಲ್ಲ. ಹೀಗಿರುವಾಗ ಏಳು ಟಿಎಂಸಿ ನೀರು ಎಲ್ಲಿಂದ ತರಲು ಸಾಧ್ಯ? ಮಂಡ್ಯ ಭಾಗದ ರೈತರು ನೀರಿಗೆ ಏನು ಮಾಡಬೇಕು? ಬೆಂಗಳೂರಿನ ಒಂದೂವರೆ ಕೋಟಿ ಜನರು ಕುಡಿಯುವ ನೀರು ಇಲ್ಲದೆ ಸಾಯಬೇಕೆ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು ಎಂದು ಒತ್ತಾಯಿಸಿದರು. ಎಡಿಸಿ ಪೂಜಾರ ವೀರಮಲ್ಲಪ್ಪ ಅವರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು.
ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶಗೌಡ ಮುದಿಗೌಡ್ರ, ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ತಾಲೂಕಾಧ್ಯಕ್ಷ ಹಾಲೇಶ ಹಾಲಣ್ಣನವರ, ಚನ್ನಪ್ಪ ಹೊನ್ನಮ್ಮನವರ, ನಾಗರಾಜ ಪೂಜಾರ, ಹಸನಸಾಬ ಹತ್ತಿಮತ್ತೂರ, ಬಿ.ಎಲ್.ಬಣಕಾರ, ಸತ್ಯವತಿ ಕಡೇರಿ, ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net