ಕನ್ನಡಿಗರಿಗೆ ಉದ್ಯೋಗ ಕಾಯ್ದೆ ಜಾರಿಗೊಳಿಸಿ; ವಲಸಿಗರಿಂದ ರಾಜ್ಯ ರಾಜಧಾನಿ ಬೆಂದಿದೆ ಎಂದು ಆಕ್ರೋಶ; ಕರವೇಯಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ

1 HVR 2
Published on

ಹಾವೇರಿ: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವ ಸಂಬಂಧ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಇಲ್ಲಿನ ದೇವಗಿರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ನಮ್ಮ ನಾಡು ದೇಶದಲ್ಲೇ ಅತಿಹೆಚ್ಚು ಭೌಗೋಳಿಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯ. ಪ್ರಕೃತಿ ಸೌಂದರ್ಯಕ್ಕೆ, ಅತ್ಯುತ್ತಮ ಹವಾಗುಣಕ್ಕೆ ಹೆಸರಾದ ರಾಜ್ಯ. ಕನ್ನಡಿಗರು ಶಾಂತಿಪ್ರಿಯರು, ಹೃದಯ ಶ್ರೀಮಂತರು. ಕನ್ನಡಿಗರು ದೇಶದಲ್ಲೇ ಮೊದಲು ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕಿದವರು. ಹೀಗೆ ಸಮೃದ್ಧಿ ಹೊಂದಿರುವ ನಾಡಿಗೆ ಇತರ ರಾಜ್ಯಗಳಿಂದ ದೊಡ್ಡ ಪ್ರಮಾಣದ ವಲಸೆ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಇತ್ತೀಚಿನ ಎರಡು ಮೂರು ದಶಕಗಳಲ್ಲಿ ಇದು ತಾರಕಕ್ಕೇರಿದೆ. ಮೊದಲು ದಕ್ಷಿಣ ಭಾರತದ ಇತರ ರಾಜ್ಯಗಳಿಂದ ಜನರು ವಲಸೆ ಬಂದು ಇಲ್ಲಿ ನೆಲೆ ನಿಂತರು. ಈಗ ಉತ್ತರದ ರಾಜ್ಯಗಳು, ಈಶಾನ್ಯ ರಾಜ್ಯಗಳಿಂದ ಜನರ ಪ್ರವಾಹವೇ ಹರಿದುಬರುತ್ತಿದೆ. ವಿಶೇಷವಾಗಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರಿನಂಥ ಮಹಾನಗರಗಳಲ್ಲಿ ವಲಸೆ ಪ್ರಮಾಣ ಮಿತಿ ಮೀರಿದೆ.
ವಲಸೆಯ ದುಷ್ಪರಿಣಾಮದಿಂದಾಗಿ ಕನ್ನಡ ನಾಡಿನ ಭೌಗೋಳಿಕ, ಸಾಮಾಜಿಕ, ರಾಜಕೀಯ ಚಹರೆಯೇ ಬದಲಾಗುತ್ತಿದೆ. ವಿಶೇಷವಾಗಿ ರಾಜ್ಯದ ರಾಜಧಾನಿ ಬೆಂಗಳೂರು ಈ ದೊಡ್ಡ ಪ್ರಮಾಣದ ವಲಸೆಯಿಂದ ಬಸವಳಿದು ಹೋಗುತ್ತಿದೆ. ಈ ಮಹಾವಲಸೆಯ ಬಹುಮುಖ್ಯ ದುಷ್ಪರಿಣಾಮ ಕನ್ನಡದ ಯುವಸಮುದಾಯದ ಮೇಲೆ ಆಗುತ್ತಿದೆ. ಕನ್ನಡಿಗರಿಗೆ ಈಗ ಉದ್ಯೋಗವಿಲ್ಲದಂತಾಗಿದೆ. ಕನ್ನಡದ ನೆಲದಲ್ಲಿ ಸ್ಥಾಪಿತವಾಗಿರುವ ಖಾಸಗಿ ಸಂಸ್ಥೆಗಳು ಹೊರರಾಜ್ಯಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನೇ ನೇಮಿಸಿಕೊಳ್ಳುತ್ತಿದ್ದು, ಅವರು ತಮ್ಮ ತಮ್ಮ ರಾಜ್ಯದ ಯುವಕ ಯುವತಿಯರನ್ನು ಕರೆತಂದು ಕೆಲಸ ಕೊಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರ ಪ್ರಮಾಣ ದಿನೇದಿನೇ ಕುಸಿಯುತ್ತಲೇ ಬರುತ್ತಿದೆ. ಹೀಗೇ ಮುಂದುವರೆದರೆ ಕನ್ನಡಿಗರು ಮುಂಬರುವ ದಿನಗಳಲ್ಲಿ ತಮ್ಮ ನೆಲದಲ್ಲಿ ತಾವೇ ಅತಂತ್ರರಾಗಿ ನರಕಯಾತನೆ ಅನುಭವಿಸುವ ಸ್ಥಿತಿ ಬಂದೊದಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ 1983ರಲ್ಲಿ ಡಾ.ಸರೋಜಿನಿ ಮಹಿಷಿ ನೇತೃತ್ವದಲ್ಲಿ ಒಂದು ಸಮಿತಿ ರಚಿಸಿ ರಾಜ್ಯದಲ್ಲಿ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಮಾನದಂಡಗಳನ್ನು ಶಿಫಾರಸು ಮಾಡಲು ಸೂಚಿಸಿದ ನಂತರ ಸಮಿತಿಯು 13-6-1984 ರಂದು ಮಧ್ಯಂತರ ವರದಿಯನ್ನು ಮತ್ತು 30-12-1986ರಂದು ಅಂತಿಮ ವರದಿಯನ್ನು ಸಲ್ಲಿಸಿತು. ಸಮಿತಿಯು ಒಟ್ಟು 58 ಶಿಫಾರಸುಗಳನ್ನು ಮಾಡಿತು. ಈ ಶಿಫಾರಸುಗಳಲ್ಲಿ, ಕರ್ನಾಟಕ ಸರ್ಕಾರವು 45 ಶಿಫಾರಸುಗಳನ್ನು ಅಂಗೀಕರಿಸಿದೆ. ಈ ಕೂಡಲೇ ಈ ವರದಿಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶಗೌಡ ಮುದಿಗೌಡ್ರ, ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಗುಡಮಿ, ಹಾವೇರಿ ತಾಲೂಕು ಅಧ್ಯಕ್ಷ ಹಾಲೇಶ ಹಾಲಣ್ಣನವರ, ಸಂತೋಷಗೌಡ ಪಾಟೀಲ, ಪರಶುರಾಮ ಈಳಗೇರ, ಮಾರುತಿ ಪೂಜಾರ, ಸಿಖಂದರ ವಾಲೀಕಾರ, ಬಿ.ಎಚ್.ಬಣಕಾರ, ಹಸನಸಾಬ ಹತ್ತಿಮತ್ತೂರ, ಅಬ್ಬು ಕೊಡಮಗ್ಗಿ, ಟಿಪ್ಪುಸುಲ್ತಾನ ಮಕಾನದಾರ, ಆನಂದ ಬಂಡಿವಡ್ಡರ, ಶಿವಾನಂದ ಪೂಜಾರ, ಕಾಳಪ್ಪ ಬಡಿಗೇರ, ಇತರರಿದ್ದರು.

ಖಾಸಗಿ ಸಂಸ್ಥೆಗಳಲ್ಲಿ ಶೇ.100ರಷ್ಟು ಮೀಸಲಾತಿ
ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹದಿನೈದು ವರ್ಷ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net