ಕರ್ಜಗಿ ರಸ್ತೆ ದುರಸ್ತಿಗೊಳಿಸಲು ಆಗ್ರಹ; ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಿ ಗ್ರಾಮಸ್ಥರ ಆಕ್ರೋಶ; ಶಾಸಕರು, ಅಧಿಕಾರಿಗಳಿಗೆ ಎಚ್ಚರಿಕೆ

17 HVR 6
Published on

ಹಾವೇರಿ: ತಾಲೂಕಿನ ಕರ್ಜಗಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಗ್ರಾಮದ ಬಸ್ ನಿಲ್ದಾಣದ ಎದುರು ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟಿಸಿದರು.

ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಶಾಸಕ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿ, ಗಡುವು ನೀಡಲಾಗಿತ್ತು. ಆದರೂ ಯಾರೊಬ್ಬರೂ ಮನವಿಗೆ ಸ್ಪಂದಿಸಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಶುಕ್ರವಾರ ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಘೋಷಣಾ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಕುರಿತು ಮುಂಚೆಯೇ ಮಾಹಿತಿ ನೀಡಿದ್ದರಿಂದ ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದರು. ಗ್ರಾಮದ ರಸ್ತೆಗಳ ವ್ಯವಸ್ಥೆ ಮತ್ತು ಅವುಗಳಿಂದಾಗು ಸಮಸ್ಯೆಗಳ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟರು. ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಇದರಿಂದ ಕಿಮೀಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿಕಾರಿಗಳು, ಗ್ರಾಮಸ್ಥರ ಅಹವಾಲು ಆಲಿಸಿದರು. ರಸ್ತೆ ದುರಸ್ತಿ ಬಗ್ಗೆ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು. ಈಗಲಾದರೂ ರಸ್ತೆ ದುರಸ್ಥಿ ಮಾಡದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಪಘಾತದ ಹಾಟ್‌ಸ್ಪಾಟ್

ಕರ್ಜಗಿ ಗ್ರಾಮದ ಮಾರ್ಗವಾಗಿ ನಾಲ್ಕು ಮುಖ್ಯರಸ್ತೆಗಳು ಹಾದು ಹೋಗುತ್ತವೆ. ಜಂಗಮನಕೊಪ್ಪ ಕ್ರಾಸ್‌ನಿಂದ ಹಿರೇಮುಗದೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಹಾವೇರಿಯಿಂದ ಲಕ್ಷ್ಮೇಶ್ವರಕ್ಕೆ ಹೋಗುವ ರಸ್ತೆಗಳು ಎರಡು ವರ್ಷಗಳಿಂದ ಸಂಪೂರ್ಣ ಹಾಳಾಗಿವೆ. ಈ ರಸ್ತೆಗಳಲ್ಲಿ ಸಂಚರಿಸಲು ಗ್ರಾಮಸ್ಥರು ಪರದಾಡುವಂತಾಗಿದೆ. ಪದೇಪದೆ ಅಪಘಾತಗಳಿಂದಾಗಿ ಅಪಘಾತಗಳ ಹಾಟ್‌ಸ್ಪಾಟ್ ಆಗಿವೆ ಎಂದು ಪ್ರತಿಭಟನಾಕಾರರು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net