

ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗದಿಂದ ಮಂಗಳವಾರ ಆಯೋಜಿಸಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಜಿಲ್ಲೆಯಲ್ಲಿ ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯಿತು.
ನಗರದ 22 ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು. ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆಯಲು ಜಿಲ್ಲೆಯಲ್ಲಿ 7,742 ಅಭ್ಯರ್ಥಿಗಳಿಗೆ ಕೆಪಿಎಸ್‌ಸಿ ಅವಕಾಶ ಕಲ್ಪಿಸಲಾಗಿತ್ತು. ಬೆಳಗ್ಗೆ 10ರಿಂದ 12 ಗಂಟೆವರೆಗೆ ನಡೆದ ಮೊದಲ ಪರೀಕ್ಷೆಗೆ 4,734 ಅಭ್ಯರ್ಥಿಗಳು ಹಾಜರಾಗಿದ್ದರು. 3,008 ಅಭ್ಯರ್ಥಿಗಳು ಗೈರಾಗಿದ್ದರು. ಮಧ್ಯಾಹ್ನ 2ರಿಂದ 4 ಗಂಟೆವರೆಗೆ ನಡೆದ ಎರಡನೇ ಪತ್ರಿಕೆ ಪರೀಕ್ಷೆಗೆ 4,720 ಅಭ್ಯರ್ಥಿಗಳು ಹಾಜರಾಗಿದ್ದರು. 3,022 ಅಭ್ಯರ್ಥಿಗಳು ಗೈರಾಗಿದ್ದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಎಡಿಸಿ ಪೂಜಾರ ವೀರಮಲ್ಲಪ್ಪ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಶಾಂತಿಯುತವಾಗಿ ಪರೀಕ್ಷೆ ಮುಕ್ತಾಯಗೊಂಡಿತು. ಸಿಸಿಟಿವಿ ಕ್ಯಾಮರಾ ಕಣ್ಗಾವಲಲ್ಲಿ ಪರೀಕ್ಷೆ ನಡೆಸಲಾಯಿತು ಎಂದು ಡಿಸಿ ತಿಳಿಸಿದರು.