ಮಹಿಳಾ ವಾರ್ಡನ್ ನೇಮಕ ಕಡ್ಡಾಯ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಸೂಚನೆ

7 HVR 12
Published on

ಹಾವೇರಿ: ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಹಿಳಾ ವಾರ್ಡನ್‌ಗಳನ್ನು ನೇಮಕ ಮಾಡಬೇಕು. ಸಹ ಶಿಕ್ಷಣ ಇರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಮಸ್ಯೆ ನಿವಾರಣೆಗೆ ಮಹಿಳಾ ವಾರ್ಡನ್ ಹಾಗೂ ಶಿಕ್ಷಕಿಯರನ್ನು ನೋಡಲ್ ಅಧಿಕಾರಗಳನ್ನಾಗಿ ನೇಮಕ ಮಾಡುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸಹಯೋಗದಲ್ಲಿ ಭಾಗೀದಾರ ಇಲಾಖಾ ಮುಖ್ಯಸ್ಥರು ಹಾಗೂ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಗಳನ್ನು ಹಾಗೂ ತಂಬಾಕು ರಹಿತ ಶಾಲೆ ಆವರಣ ಎಂಬ ನಾಮಫಲಕಗಳನ್ನು ಅಳವಡಿಸುವಂತೆ ಸಲಹೆ ನೀಡಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರುವ ಕೆಲವನ್ನು ಪರಿಣಾಮಕಾರಿಯಾಗಿ ಮಕ್ಕಳನ್ನು ದುಡಿಮೆಗೆ ನೇಮಕ ಮಾಡಿಕೊಂಡ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪ್ರತಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಕ್ಲಬ್‌ಗಳನ್ನು ಆರಂಭಿಸಿ, ಅತ್ಯಂತ ಕ್ರಿಯಾಶೀಲವಾಗಿ ಈ ಕ್ಲಬ್‌ಗಳು ಕಾರ್ಯ ನಿರ್ವಹಿಸುವಂತೆ ನಿಗಾವಹಿಸಬೇಕು. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ತಡೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಖಾಸಗಿ ಶಾಲೆಗೆ ಸಮಾನವಾಗಿ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಖಾಸಗಿ ಶಾಲಾ ವಾಹನಗಳ ನೋಂದಣಿ ಹಾಗೂ ಚಾಲಕ ಮತ್ತು ನಿರ್ವಾಹಕರಿಗೆ ಗುರುತಿನ ಪತ್ರ ನೀಡಿ. ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡ ಮಕ್ಕಳ ವರ್ಗಾವಣೆ ಪತ್ರವನ್ನು ನೀಡಲು ವಿಳಂಬ ಮಾಡುವ, ಶುಲ್ಕಕ್ಕೆ ಒತ್ತಾಯಿಸುವ ಖಾಸಗಿ ಶಾಲೆಗಳ ಪರವಾನಿಗೆ ರದ್ದುಪಡಿಸಿ ಎಂದು ಡಿಡಿಪಿಐಗೆ ಸೂಚಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾದೀಶ ಪುಟ್ಟರಾಜು ಮಾತನಾಡಿ, ಪೋಕ್ಸೋ ಕಾಯ್ದೆಯ ಸಂತ್ರಸ್ತರಿಗೆ ಪರಿಹಾರ ವ್ಯವಸ್ಥೆ ಇದೆ. ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತರ ಪಾಲಕರು ಯಾವುದೇ ಕಾರಣಕ್ಕೂ ರಾಜೀಯಾಗಬಾರದು ಎಂದರು.
ಸಭೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾಧಿಕಾರಿ ಪ್ರವೀಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಡಿವೈಎಸ್‌ಪಿ ಶಿವಾನಂದ ಚಲವಾದಿ, ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷ ಎಸ್.ಎಚ್.ಮಜೀದ್, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net