ಹಾವೇರಿ: ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳಲ್ಲ್ಲಿ ನ.18, 19ರಂದು ಮತದಾರರ ನೋಂದಣಿ, ತಿದ್ದುಪಡಿಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಲ್ಲ ಮತಗಟ್ಟೆಗಳ ಅಧಿಕಾರಿಗಳು ಹಾಜರಿದ್ದು ಅರ್ಜಿಗಳನ್ನು ಸ್ವೀಕರಿಸುತ್ತಾರೆ. ಮತದಾರರು ಇದರ ಸದುಪಯೋಗ ಸದುಪಯೋಗ ಪಡೆದುಕೊಳ್ಳಬೇಕು.
ವಿಧಾನಸಭಾ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಸಂಬಂಧಿಸಿದಂತೆ, ಅರ್ಹತಾ ದಿನಾಂಕ:01-01-2024ಕ್ಕೆ ಸಂಬಂಧಿಸಿದಂತೆ, ದಿನಾಂಕ 27-10-2023ರಂದು ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ದಿನಾಂಕ 27-10-2023ರಿಂದ 09-12-2023ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಹೊಸದಾಗಿ ಯುವಕರು/ಯುವತಿಯರು ಮತ್ತು ಸಾರ್ವಜನಿಕರ ಹೆಸರು ಸೇರ್ಪಡೆ ಮಾಡಿಕೊಳ್ಳಲು ನಮೂನೆ-6ನ್ನು ಭರ್ತಿಮಾಡಿ ಸಲ್ಲಿಸಬಹುದಾಗಿದೆ. ಹೆಸರು ಕಡಿಮೆಗೊಳಿಸಲು ನಮೂನೆ-7, ಹೆಸರು ಇತ್ಯಾದಿ ತಿದ್ದುಪಡಿ ಮತ್ತು ಹೆಸರು ವರ್ಗಾವಣೆ ಬಯಸಿದ್ದಲ್ಲಿ ನಮೂನೆ-8ರಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿಗಳನ್ನು ಭರ್ತಿ ಮಾಡಿ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ (ಬಿ.ಎಲ್‌ಒ) ಅವರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.