

ಹಾವೇರಿ: ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಆರ್ಥಿಕ ಬದಲಾವಣೆ ಜತೆಗೆ ಅನೇಕ ಬದಲಾವಣೆಗಳಾಗಿವೆ. ಶ್ರೀಸಾಮಾನ್ಯನ ಆದಾಯ ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ಹೆಚ್ಚಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಪಂಚಗ್ಯಾರಂಟಿ ಯೋಜನೆಗಳಿಂದ ತಾಯಂದಿರಿಗೆ ಆತ್ಮಬಲ ಬಂದಿದೆ. ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷವಾದರೂ ಆಗದ ಬದಲಾವಣೆಗಳು, ಗ್ಯಾರಂಟಿ ಯೋಜನೆ ಜಾರಿಗೆ ಬಂದ ಎರಡು ವರ್ಷದಲ್ಲಿ ಆಗಿವೆ ಎಂದರು.
ದೇಶದ 31 ರಾಜ್ಯಗಳ ಪೈಕಿ ಕರ್ನಾಟಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಾದರಿಯಾಗಿದೆ. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆ ಈಡೇರಿಸಿದೆ. ಗ್ಯಾರಂಟಿ ಯೋಜನೆಯಡಿ 97 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಗ್ಯಾರಂಟಿ ಯೋಜನೆ ಸದುಪಯೋಗವಾಗಬೇಕು, ದುರುಪಯೋಗವಾಗಬಾರದು. ಪಡಿತರ ಅಕ್ಕಿ ಹೊರಗಡೆ ಮಾರಾಟ ಮಾಡಬಾರದು ಎಂದು ಸಲಹೆ ನೀಡಿದರು.
ಜಿಡಿಪಿಯಲ್ಲಿ (ತಲಾದಾಯ) ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ. ಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಯ 3ನೇ ವರ್ಷದ ಕಾರ್ಯಕ್ರಮವನ್ನು ಉತ್ತರ ಕರ್ನಾಟಕದ ಎಲ್ಲ ಮಹಿಳೆಯರನ್ನು ಸೇರಿಸಿ ಹಾವೇರಿ ನಗರದಲ್ಲಿ ಬೃಹತ್ ಕಾರ್ಯಕ್ರಮ ಮಾಡೋಣ ಎಂದು ಹೇಳಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಳಿಗೆ ಉದ್ಘಾಟಿಸಿ ಮಾತನಾಡಿದರು. ಡಿ.ದೇವರಾಜ ಅರಸು ಅವರಿಂದ ಹಿಡಿದು ಈವರೆಗೆ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯು ಘನತೆ-ಗೌರವದಿಂದ ಬದುಕುವಂತಾಗಿದೆ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸಿದೆ. ಇವು ಬಿಟ್ಟಿಭಾಗ್ಯ ವಲ್ಲ, ಈ ಯೋಜನೆಗಳಿಂದ ಬಡ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಗ್ಯಾರಂಟಿ ಯೋಜನೆಗಳ ಕುರಿತು ಜನರಿಂದ ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.
ಶಾಸಕರಾದ ಶ್ರೀನಿವಾಸ ಮಾನೆ, ಯು.ಬಿ.ಬಣಕಾರ, ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿದರು. ಶಾಸಕರಾದ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾಗೃತಿ ಸಮಿತಿಯ ಡಾ.ವಾಸು ಎಚ್. ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ, ಎಂ.ಎಂ.ಮೈದೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಹಾವೇರಿ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಕೊಟ್ರೇಶಪ್ಪ ಬಸೇಗಣ್ಣಿ, ಜಿಪಂ ಉಪ ಕಾರ್ಯದರ್ಶಿ ಪುನೀತ, ಮತ್ತಿತರರು ಉಪಸ್ಥಿತರಿದ್ದರು.
ಭಿತ್ತಿಪತ್ರ ಬಿಡುಗಡೆ: ಮಾದಕ ವಸ್ತು ಮುಕ್ತ ಕರ್ನಾಟಕ ಹಾಗೂ ದೇವದಾಸಿ ಮತ್ತು ಟ್ರಾನ್ಸ್‌ಜೆಂಡರ್ ಸಮೀಕ್ಷೆ ಕುರಿತು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಮಳಿಗೆಗಳು: ಗ್ಯಾರಂಟಿ ಯೋಜನೆಗಳ ಮಾಹಿತಿ, ಮಹಿಳಾ ಸ್ವಸಹಾಯ ಸಂಘದ ಸದಸ್ಯರು ತಯಾರಿಸಿದ ಕರಕುಶಲ ವಸ್ತುಗಳ ಮಾರಾಟದ 15 ಮಳಿಗೆಗಳು ಗಮನ ಸೆಳೆದವು.