ಹಾವೇರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಗಮವಾಗಿ ಚುನಾವನೆ ನಡೆಸಲು ಹಾಗೂ ಚುನಾವಣಾ ಚಟುವಟಿಕೆಗಳ ಪರಿಣಾಮಕಾರಿ ಮೇಲ್ವಿಚಾರಣೆಗಾಗಿ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತೆರೆಯಲಾದ ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
ನೋಡಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಎಸ್.ಪ್ರವೀಣ, ಹಾಗೂ ಮೇಲ್ವಿಚಾರಣಾ ಅಧಿಕಾರಿಯಾಗಿ ಸಹಕಾರಿ ಸಂಘಗಳ ಇಲಾಖೆ ಸಹಾಯಕ ನಿಬಂಧಕ ಎಸ್.ಜಿ.ಸುಣಗಾರ ಅವರನ್ನು ನೇಮಿಸಲಾಗಿದೆ. ಜಿಲ್ಲೆಯ ಹಾನಗಲ್ಲ, ಶಿಗ್ಗಾಂವಿ, ಹಾವೇರಿ, ಬ್ಯಾಡಗಿ, ಹಿರೇಕೆರೂರ ಹಾಗೂ ರಾಣೆಬೆನ್ನೂರ ಆರು ವಿಧಾನಸಭಾ ಕ್ಷೇತ್ರ ಹಾಗೂ ಗದಗ ಜಿಲ್ಲೆಯ ಶಿರಹಟ್ಟಿ, ಗದಗ ಹಾಗೂ ರೋಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 3 ಗಂಟೆವರೆಗೆ, ಮಧ್ಯಾಹ್ನ 3ರಿಂದ ರಾತ್ರಿ 10ರವರೆಗೆ ಹಾಗೂ ರಾತ್ರಿ 10ರಿಂದ ಬೆಳಗ್ಗೆ 7 ಗಂಟೆವರೆಗೆ ಮೂರು ಪಾಳೆಯಲ್ಲಿ ಕೆಲಸ ಮಾಡಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.