ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ; ಒಂದೂವರೆ ವರ್ಷದಲ್ಲಿ ನೀರಾವರಿ ಯೋಜನೆ ಪೂರ್ಣ; ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ

15 HVR 1 B
Published on

ಹಾವೇರಿ: ಕೃಷಿಯನ್ನೇ ಮೂಲ ಆದಾಯ ಮಾಡಿಕೊಂಡಿರುವ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ, ಉನ್ನತ ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿ ನನ್ನ ಆದ್ಯತೆಯಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು ನಾನು ಸಂಕಲ್ಪ ತೊಟ್ಟಿದ್ದೇನೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆಯ ಮಾತುಗಳನ್ನಾಡಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ 77ನೇ ಸ್ವಾತಂತ್ರೊೃೀತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಅಧಿಕಾರ, ಅವಕಾಶ ಮತ್ತು ಸಂಪತ್ತು ಸಮಾಜದ ಎಲ್ಲ ಜನರಿಗೂ ಹಾಗೂ ವರ್ಗಗಳಿಗೂ ಹಂಚಿಕೆಯಾಗಬೇಕು ಎಂಬುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಇದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕುಡಿಯುವ ನೀರಿನ ಯೋಜನೆಗಳಾದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ 726 ಜನವಸತಿ ಪ್ರದೇಶದ ಕಾಮಗಾರಿಗಳು ಮಂಜೂರಾಗಿದೆ. ಈ ಪೈಕಿ 410 ಜನವಸತಿಗಳಲ್ಲಿ ಕಾಮಗಾರಿಗಳು ಪೂರ್ಣಗೊಂಡಿವೆ. 316 ಜನವಸತಿಗಳಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರತಿ ಮನೆಗೆ ಕಾರ್ಯಾತ್ಮಕ ನಳದ ಮೂಲಕ ಪ್ರತಿ ವ್ಯಕ್ತಿಗೆ ಕನಿಷ್ಠ 55 ಲೀಟರ್ ನೀರು ಒದಗಿಸುವ ಈ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.
ಜಿಲ್ಲೆಯಲ್ಲಿ 16 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಕಾರ್ಯಾಚರಣೆಯಲ್ಲಿವೆ. ಆಣೂರ, ತಡಸ, ಹಂಸಭಾವಿ ಬಹುಗ್ರಾಮ ಯೋಜನೆಗಳಡಿ 451 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ 1,365 ಕೋಟಿ ರೂ. ಯೋಜನೆಗಳು ಪ್ರಗತಿ ಹಂತದಲ್ಲಿವೆ. ಎಸ್.ಡಿ.ಪಿ. 4,215 ಯೋಜನೆಯಡಿ 5.77 ಕೋಟಿ ರೂ. ಮೊತ್ತದ 308 ಕಾಮಗಾರಿಗಳು ಅನುಮೋದನೆಗೊಂಡಿದ್ದು, ಈಗಾಗಲೇ 3.86 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ಕ್ರಮವಹಿಸಿ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಅಮೃತ 2.0 ನಗರ ಕುಡಿಯುವ ನೀರಿನ ಯೋಜನೆಯಡಿ ಜಿಲ್ಲೆಯಲ್ಲಿ ಶಿಗ್ಗಾಂವಿ, ಬಂಕಾಪುರ, ಸವಣೂರ, ಹಿರೇಕೆರೂರ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗಾಗಿ 190 ಕೋಟಿ ರೂ. ಮೊತ್ತದ ಕಾಮಗಾರಿಗೆ ಅನುಮೋದನೆ ದೊರೆತಿದೆ. ಈ ಯೋಜನೆಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಕಾಲಮಿತಿ ನಿಗಧಿಪಡಿಸಲಾಗಿದೆ. ಹಾವೇರಿ, ಗುತ್ತಲ, ರಟ್ಟಿಹಳ್ಳಿ ಹಾಗೂ ಹಾನಗಲ್ಲ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗಾಗಿ 213.31ಕೋಟಿ ರೂ. ಮೊತ್ತದ ಕಾಮಗಾರಿಗೆ ಯೋಜನೆ ತಯಾರಿಸಿದ್ದು, ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದರು.
ಕರ್ನಾಟಕ ನೀರಾವರಿ ನಿಗಮದಿಂದ ತುಂಗಾ ಮೇಲ್ದಂಡೆ ಯೋಜನೆಯಡಿ ರಾಣೇಬೆನ್ನೂರ ವ್ಯಾಪ್ತಿಯಲ್ಲಿ 13 ಏತ ನೀರಾವರಿ ಹಾಗೂ ಕೆರೆ ತುಂಬಿಸುವ ಯೋಜನೆಗಳಿದ್ದು, ಈ ಪೈಕಿ 9 ಯೋಜನೆಗಳು ಪೂರ್ಣಗೊಳಿಸಲಾಗಿದೆ. ಬಾಕಿ ಉಳಿದಿರುವ 4 ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
130 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ರಾಣೇಬೆನ್ನೂರಿನ ಹೂಲಿಹಳ್ಳಿ ಮೆಗಾ ಮಾರುಕಟ್ಟೆಯಲ್ಲಿ ಚಟುವಟಿಕೆಗಳನ್ನು ಶೀಘ್ರವೇ ಆರಂಭಿಸಲಾಗುವುದು. ಜಿಲ್ಲೆಯ ಹಾವೇರಿ, ಬ್ಯಾಡಗಿ, ಹಾನಗಲ್ಲ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು 19 ಕೋಟಿ ರೂ. ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಕೊನೆಯಲ್ಲಿ ಶಾಲಾ ಮಕ್ಕಳಿಂದ ಜರುಗಿದ ದೇಶಭಕ್ತಿಗೀತೆಗಳಿಗೆ ನೃತ್ಯ, ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ದೇಶಭಕ್ತರ ವೇಷಭೂಷಣದಲ್ಲಿ ಮಕ್ಕಳು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಎಲ್ಲೆಲ್ಲೂ ರಾಷ್ಟ್ರಧ್ವಜ ಹಿಡಿದ ಮಕ್ಕಳ ಕಲರವ ಕಂಡು ಬಂತು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿ.ಪಂ. ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಮತ್ತಿತರರಿದ್ದರು.

ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ಪ್ರಸ್ತಾವನೆ
365 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಕಟ್ಟಡ ಈಗಾಗಲೇ ಶೇ.78ರಷ್ಟು ಪ್ರಮಾಣದಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಇದೇ ವರ್ಷದಲ್ಲಿ ಮೊದಲ ಮತ್ತು ಎರಡನೇ ವರ್ಷದ ವೈದ್ಯಕೀಯ ತರಗತಿಗಳನ್ನು ಹೊಸ ಕಟ್ಟಡದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಕಾಮಗಾರಿಗೆ ವೇಗ ನೀಡಲಾಗಿದೆ. ಹೊಸದಾಗಿ 206 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆಯ ವೈದ್ಯಕೀಯ ಕಾಲೇಜ್ ಬೋಧನಾ ಆಸ್ಪತ್ರೆ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿವಾನಂದ ಪಾಟೀಲ ಹೇಳಿದರು.
ಪ್ರವಾಸಿ ತಾಣವಾಗಿ ಹೆಗ್ಗೇರಿ ಕೆರೆ
ಜಿಲ್ಲೆಯ ಪ್ರವಾಸಿ ಕ್ಷೇತ್ರಗಳಿಗೆ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರನ್ನು ಆಕರ್ಷಿಸಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ, 600 ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಹೆಗ್ಗೇರಿ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪಾಟೀಲರು ತಿಳಿಸಿದರು.

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಜಿಲ್ಲೆಯ ಹಿಂದುಳಿದ ವಲಯಗಳ ಉನ್ನತೀಕರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವ ಇಚ್ಛೆ ನನ್ನದಾಗಿದೆ. ಜಿಲ್ಲೆಯ ಹಲವು ಸಮಸ್ಯೆಗಳ ನಿವಾರಣೆಗೆ ನಮ್ಮ ಎಲ್ಲ ಶಾಸಕರೂ ಜೆತೆಗೂಡಿ ಪ್ರಾಮಾಣಿಕ ಪ್ರಯತ್ನ ಮಾಡಲು ಇಚ್ಛಿಸಿದ್ದೇವೆ. ನಿಮ್ಮೆಲ್ಲರ ಬೆಂಬಲ, ಸಹಕಾರ ಸದಾ ನಮ್ಮೊಂದಿಗಿರಲಿ
ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net