

ಹಾವೇರಿ: ಮಾದಕ ವಸ್ತುಗಳ ವ್ಯಸನದಿಂದ ವ್ಯಸನಿಗಳ ಜೀವನವೇ ಹಾಳಾಗುತ್ತದೆ. ಜತೆಗೆ ಅವರ ಕುಟುಂಬ ಹಾಗೂ ಸಮಾಜಕ್ಕೂ ಇದರ ಪರಿಣಾಮ ಬೀರುತ್ತದೆ. ಹಾಗಾಗಿ, ಯುವಕರು ಮಾದಕ ವ್ಯಸನಕ್ಕೆ ಒಳಗಾಗದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಕೌಟುಂಬಿಕ ನ್ಯಾಯಾಧೀಶ, ಪ್ರಭಾರ ಜಿಲ್ಲಾ ವ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷ ಎಂ.ಜಿ ಶಿವಳ್ಳಿ ಸಲಹೆ ನೀಡಿದರು.
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಶನಿವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾಸ್ಪತ್ರೆ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಅಪಾಯ ಹಾಗೂ ಕುಟುಂಬ, ಸಮಾಜ ಮತ್ತು ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ತಂಬಾಕು ರಹಿತ ದಿನ ಆಚರಣೆ ಮಾಡಲಾಗುತ್ತಿದೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಗಳ ಕುರಿತು ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಪಿ.ಎಸ್ ಹೆಬ್ಬಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್ ಹಾವನೂರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ತಂಬಾಕು ನಿಯಂತ್ರಣಾಧಿಕಾರಿ ಡಾ.ಜಗದೀಶ ಪಾಟೀಲ, ಜಿಲ್ಲಾ ಎನ್.ಒ.ಎಚ್.ಪಿ. ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಕಲ್ಪನಾ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಜಿಲ್ಲಾ ಶೂಶ್ರುಷಕ ತರಬೇತಿ ಕೇಂದ್ರದ ಪ್ರಾಂಶುಪಾಲೆ ಸರಸ್ವತಿ ವೈ.ಎಚ್. ಇತರರು ಭಾಗವಹಿಸಿದ್ದರು.