ತಂಬಾಕು ನಿಯಂತ್ರಿಸುವಲ್ಲಿ ಪಂಚಾಯಿತಿ ಅಧಿಕಾರಿಗಳ ಪಾತ್ರ ಪ್ರಮುಖ

28 HVR 3
Published on

ಹಾವೇರಿ: ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಆರೋಗ್ಯ ಇಲಾಖೆಯೊಂದಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಇತ್ತೀಚೆಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಆಯ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ‘ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೋಟ್ಪಾ-2003 ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಮತ್ತು ಚಿಕಿತ್ಸೆ ಸೌಲಭ್ಯಗಳ ಕುರಿತು ‘ತಂಬಾಕು ಮುಕ್ತ ಗ್ರಾಮ ಮತ್ತು ತಂಬಾಕು ಮುಕ್ತ ಪಂಚಾಯಿತಿ’ಗಳನ್ನಾಗಿಸುವ ಕುರಿತು ಸೋಮವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ, ಅವರು ಮಾತನಾಡಿದರು.
ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡುವವರ ವಿರುದ್ಧ ಹಾಗೂ ತಂಬಾಕು ಮಾರಾಟ ಮಾಡುವವರ ವಿರುದ್ಧ ಹಾಗೂ ಶಾಲಾ-ಕಾಲೇಜು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ಮಾರಾಟ ಮಾಡುವುದನ್ನು ತಡೆಯಲು ಅಗತ್ಯ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಡಾ.ಸಂತೋಷ ದಡ್ಡಿ ಮತ್ತು ದಾದಾಪೀರ ಹುಲಿಕಟ್ಟಿ ಉಪನ್ಯಾಸ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net