

ಹಾವೇರಿ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ನ.11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವೀರರಾಣಿ ಒನಕೆ ಓಬವ್ವ ಜಯಂತಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮುದಾಯದ ಎಲ್ಲ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಬೆಳಗ್ಗೆ 9.30ಕ್ಕೆ ಒನಕೆ ಓಬವ್ವರ ಭಾವಚಿತ್ರ ಮೆರವಣಿಗೆ ಆರಂಭಿಸುವುದು. ಬೆಳಗ್ಗೆ 11 ನಗರದ ತಾಲೂಕು ಪಂಚಾಯಿತಿ ಸಭಾಂಗಣಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸುವಂತೆ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದರು. ಮೆರವಣಿಗೆ, ಕಲಾತಂಡಗಳ ಆಯ್ಕೆ, ಆಮಂತ್ರಣ ಪತ್ರಿಕೆ, ಕಾರ್ಯಕ್ರಮದ ವೇದಿಕೆ, ಆಸನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ತಿಳಿಸಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.