

ಹಾವೇರಿ: ಜಿಲ್ಲೆಯ ಪ್ರತಿಯೊಂದು ಇಲಾಖೆಯಲ್ಲಿ ನೇಮಕ ಮಾಡಿಕೊಂಡ ಹೊರಗುತ್ತಿಗೆ ನೌಕರರು ಹಾಗೂ ಕಾರ್ಮಿಕರಿಗೆ ಸಕಾಲಕ್ಕೆ ವೇತನ ಪಾವತಿ ಮಾಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ವೇಳೆ ವೇತನ ವಿಳಂಬವಾಗಿದಲ್ಲಿ ಹಾಗೂ ಸರಿಯಾಗಿ ಪಾವತಿಯಾಗದಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿ ಹಾಗೂ ಕಾರ್ಮಿಕರು ಶಾಸನಾತ್ಮಕ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಿ.ಜಿ ನಾಗೇಶ ಹಾಗೂ ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳು ಹಾಗೂ ನಿಗಮ ಮಂಡಳಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳು, ಕನಿಷ್ಠ ವೇತನ ಕಾಯ್ದೆ, ವೇತನ ಪಾವತಿ ಕಾಯ್ದೆ, ಮಾತೃತ್ವ ಕಾಯ್ದೆ, ಗುತ್ತಿಗೆ ಕಾರ್ಮಿಕ ಕಾಯ್ದೆ ಹಾಗೂ ಇನ್ನಿತರ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ, ಇತರರು ಉಪಸ್ಥಿತರಿದ್ದರು.