

ಹಾವೇರಿ: ಗೌರಿ-ಗಣೇಶ ಹಬ್ಬವನ್ನು ಬಣ್ಣರಹಿತ ಮಣ್ಣಿನ, ನೈಸರ್ಗಿಕ ಮೂರ್ತಿಗಳೊಂದಿಗೆ ಆಚರಿಸಿ, ನಂತರ ಗೌರಿ-ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ ಮೂರ್ತಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಐ.ಪಿ.ಸಿ ಸೆಕ್ಷನ್ 1860ರ ಪ್ರಕಾರ ಕ್ರಮ ಜರುಗಿಸಲಾಗುವುದು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ, ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು. ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಲು ತಿಳಿಸಿದ್ದಾರೆ.
ಶಬ್ದ ಮಾಲಿನ್ಯ ನಿಯಮಗಳ ಅನುಸಾರ ಧ್ವನಿವರ್ಧಕ ಬಳಕೆ, ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟು ಮಾಡುವ ಉಪಕರಣಗಳ ಬಳಕೆಗೆ ಕರ್ನಾಟಕ ಪೊಲೀಸ್ ಕಾಯ್ದೆ, 1963ರನ್ವಯ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ಸಂಬಂಧಿಸಿದ ಮಾರ್ಗಸೂಚಿಗಳನ್ವಯ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ನಿಯಮ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.