ಮಟ್ಕಾ, ಇಸ್ಪೀಟ್ ಜೂಜಾಟಕ್ಕೆ ಬ್ರೇಕ್ ಹಾಕಿ; ಬಂದ್ ಮಾಡದಿದ್ದರೆ 16ರಂದು ಎಸ್‌ಪಿ ಕಚೇರಿ ಎದುರು ಪ್ರತಿಭಟನೆ; ರೈತ ಮುಖಂಡರ ಎಚ್ಚರಿಕೆ

6 HVR 5
Published on

ಹಾವೇರಿ: ಜಿಲ್ಲೆಯಲ್ಲಿ ಮಟ್ಕಾ, ಇಸ್ಪೀಟ್, ಬೆಟ್ಟಿಂಗ್ ಜೂಜಾಟ ಹಾಗೂ ಅಕ್ರಮವಾಗಿ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದ್ದು, ಅ.16ರ ಒಳಗಾಗಿ ಇದಕ್ಕೆಲ್ಲ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ನೊಂದ ಮಹಿಳೆಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ರೈತ ಮುಖಂಡ ಹನುಮಂತಪ್ಪ ಕಬ್ಬಾರ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಇದರಿಂದ ಅನೇಕ ಅಮಾಯಕ ಯುವಕರು, ರೈತರು, ಕೂಲಿ ಕಾರ್ಮಿಕರ ಕುಟುಂಬಗಳು ಬೀದಿಗೆ ಬಂದಿವೆ. ಹಲವರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಅಧಿಕಾರಿಗಳು ಇವುಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮಟ್ಕಾ ಜೂಜಾಟ, ಇಸ್ಪೀಟ್ ದಂಧೆ, ಕ್ಲಬ್‌ಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಬೇಕು. ಹಳ್ಳಿ ಮತ್ತು ನಗರಗಳಲ್ಲಿರುವ ಮನೆಗಳಲ್ಲಿ, ಎಗ್‌ರೈಸ್ ಅಂಗಡಿಗಳಲ್ಲಿ, ಹೋಟೆಲ್‌ಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು, ಮದ್ಯ ಮಾರಾಟ ಬಂದ್ ಮಾಡಿಸಬೇಕು. ಅಕ್ರಮ ಗಣಿಗಾರಿಕೆ ಮತ್ತು ಮಧ್ಯರಾತ್ರಿ ನಡೆಯುವ ಮರಳು ಮಾಫಿಯಾ ತಡೆಗಟ್ಟಬೇಕು. ನಕಲಿ ವೈದ್ಯರ ಹಾವಳಿ ತಡೆಗಟ್ಟಬೇಕು. ಕ್ರಿಕೆಟ್ ಬೆಟ್ಟಿಂಗ್ ದಂಧೆ ಮತ್ತು ಬಡ್ಡಿ ದಂಧೆಕೋರರನ್ನು ಮಟ್ಟ ಹಾಕಬೇಕು. ಇಲ್ಲದಿದ್ದರೆ .16ರಂದು ನೊಂದ ಮಹಿಳೆಯರೊಂದಿಗೆ ಮತ್ತು ವಿವಿಧ ಸಂಘಟನೆಯ ಮುಖಂಡರೊಂದಿಗೆ, ಜಿಲ್ಲಾ ರೈತ ಸಂಘಗಳ ಒಕ್ಕೂಟ ಸಾಮೂಹಿಕ ನಾಯಕತ್ವದಡಿಯಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಅಖಿಲ ಕರ್ನಾಟಕ ರೈತ ಸಂಘ ರಾಜ್ಯಾಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ ಮಾತನಾಡಿ, ಅಕ್ರಮ ಚಟುವಟಿಕೆಗಳು ಜಿಲ್ಲೆಗೆ ಕಪ್ಪುಚುಕ್ಕೆಯಾಗಿದೆ. ಇವುಗಳನ್ನು ತಡೆಗಟ್ಟಬೇಕಾದ ಅಧಿಕಾರಿಗಳು ಎಲ್ಲ ಗೊತ್ತಿದ್ದರೂ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ಕೆಲಸ ಮಾಡದೇ, ಸಂವಿಧಾನಾತ್ಮಕ ಅಧಿಕಾರ ಚಲಾಯಿಸಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ರಾಜಶೇಖರ ದೂದಿಹಳ್ಳಿ, ಪ್ರಕಾಶ ಬಾರ್ಕಿ, ಮಹೇಶ ಕೊಟ್ಟೂರ, ಬಸವರಾಜ ಮೇಲಗಿರಿ, ಹನುಮಂತಪ್ಪ ಕೋಣನಕೊಪ್ಪ, ಭುವನೇಶ್ವರಿ ಬಡೆಮ್ಮನವರ, ಲಲಿತಾ ಲಮಾಣಿ, ಶೈಲಮ್ಮ ಹರನಗಿರಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net