ಬೆಂಬಲ ಬೆಲೆ ಅಡಿ ಶುಂಠಿ ಖರೀದಿಸಿ; ಬೇಡ್ತಿ- ವರದಾ ನದಿ ಜೋಡಣೆ ಬಗ್ಗೆ ಬಜೆಟ್‌ನಲ್ಲಿ ಘೋಷಿಸಿ; ಬೃಹತ್ ಪ್ರತಿಭಟನೆಯಲ್ಲಿ ರೈತರ ಆಗ್ರಹ

24 HVR 2 B
Published on

ಹಾವೇರಿ: ಶುಂಠಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದು, ಕ್ವಿಂಟಾಲ್‌ಗೆ 10 ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಿ ಖರೀದಿಸಬೇಕು. ಬೇಡ್ತಿ-ವರದಾ ನದಿ ಜೋಡಣೆ ಬಗ್ಗೆ ಈ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು. ವಿದ್ಯುತ್ ಸಮಸ್ಯೆ, ಬೆಳೆ ವಿಮೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ರೈತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಕಾಗಿನೆಲೆ ರಸ್ತೆಯ ಮುರುಘರಾಜೇಂದ್ರ ಮಠದಿಂದ ಪ್ರತಿಭಟನಾ ರ‌್ಯಾಲಿ ಆರಂಭಿಸಿದ ರೈತರು, ಪಿ.ಬಿ ರಸ್ತೆ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತವನ್ನು ತಲುಪಿದರು. ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರೈತ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಸಮಸ್ಯೆಯಿಂದಾಗಿ ನೀರಿಲ್ಲದೇ ಒಣಗಿದ ಮೆಕ್ಕೆಜೋಳದ ಗಿಡಗಳೊಂದಿಗೆ ಪ್ರತಿಭಟಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ಜಿಲ್ಲೆಯಲ್ಲಿ ಸಾವಿರಾರು ರೈತರು ಸಾಲ ಮಾಡಿ ಶುಂಠಿ ಬೆಳೆದಿದ್ದು, ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಹಾವೇರಿ ಜಿಲ್ಲೆ ಶಾಶ್ವತ ಬರಗಾಲದಿಂದ ಮುಕ್ತಿ ಹೊಂದಬೇಕಾದರೆ ಬೇಡ್ತಿ-ವರದಾ ನದಿ ಜೋಡಣೆ ಅವಶ್ಯವಿದೆ. ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸರಕಾರಕ್ಕೆ ಒತ್ತಡ ಹಾಕಿ, ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಿ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿದರು.

ಕಳೆದ ಮುಂಗಾರಿನಲ್ಲಿ ಮಧ್ಯಂತರ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ 90 ಕೋಟಿ ಪರಿಹಾರದ ಬದಲು, ಕೇವಲ 9.66 ಕೋಟಿ ರೂ. ಬಿಡುಗಡೆಯಾಗಿದೆ. ವಿಮಾ ಕಂಪನಿ ಮೋಸ ಮಾಡಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಮರುಪರಿಶೀಲನೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು. ವಿದ್ಯುತ್ ಕಣ್ಣಾಮುಚ್ಚಾಲೆ ಆಟದಿಂದ ರೈತರ ನೀರಾವರಿ ಬೆಳೆಗಳು ಒಣಗುತ್ತಿವೆ. ಕಳಪೆ ಮಟ್ಟದ ವಿದ್ಯುತ್ ಪೂರೈಕೆಯಾಗುತ್ತಿದ್ದು, ಕನಿಷ್ಠ 7 ತಾಸು ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಬ್ಯಾಂಕ್, ಫೈನಾನ್ಸ್‌ಗಳ ದಬ್ಬಾಳಿಕೆ ಸಾಲ ವಸೂಲಿ ನಿಲ್ಲಿಸಬೇಕು. ರೇಷ್ಮೆ ಬೆಳೆಗಾರರಿಗೆ ಮನೆ ಕಟ್ಟಿಕೊಡಲು ಸಹಾಯಧನ ಮಂಜೂರು ಮಾಡಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಡ್ರಿಪ್ ಹಾಗೂ ಸ್ಪಿಂಕ್ಲರ್‌ಗಳನ್ನು ಇತರೆ ಪರಿಕರಗಳಿಗೆ ಸಹಾಯಧನ ಮುಂದುವರೆಸಬೇಕು. ರೈತರ ಟಿ.ಸಿ ಹಾಗೂ ಗ್ರಿಡ್‌ಗಳನ್ನು ಅಪ್‌ಗ್ರೇಡ್ ಮಾಡಬೇಕು. ಅಕ್ರಮ ಸಕ್ರಮ ಯೋಜನೆಯಡಿ ಕಂಬ ವೈರ್, ಟಿ.ಸಿ ಕೊಡುವ ವ್ಯವಸ್ಥೆ ಪುನರ್ ಆರಂಭಿಸಬೇಕು ಎಂದು ಒತ್ತಾಯಿಸಿದರು. ರೈತರ ಬೇಡಿಕೆ ಈಡೇರಿಸದಿದ್ದರೆ ಸ್ಥಳೀಯ ಶಾಸಕರ ವಿರುದ್ಧ ಪ್ರತಿಭಟಿಸಲಾಗುವುದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎಚ್.ಎಚ್ ಮುಲ್ಲಾ, ಕಾರ್ಯಾಧ್ಯಕ್ಷ ಶಿವಬಸಪ್ಪ ಗೋವಿ, ಪ್ರಮುಖರಾದ ಗಂಗಣ್ಣ ಎಲಿ, ಮಹ್ಮದಗೌಸ್ ಪಾಟೀಲ, ಶಿವಯೋಗಿ ಹೊಸಗೌಡ್ರ, ಮರಿಗೌಡ ಪಾಟೀಲ, ರುದ್ರಗೌಡ ಕಾಡನಗೌಡ್ರ, ಸುರೇಶ ಹೊನ್ನಪ್ಪನವರ, ದಿಳ್ಳೇಪ್ಪ ಮಣ್ಣೂರ, ಪ್ರಭುಗೌಡ ಪ್ಯಾಟಿ, ಮುತ್ತು ಗುಡಗೇರಿ, ರಾಜು ತರ್ಲಘಟ್ಟ , ಶಂಕರಗೌಡ ಶಿರಗಂಬಿ, ಚನ್ನಪ್ಪ ಮರಡೂರು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net