

ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಡಿಸೆಂಬರ್ 9ರಂದು ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.
ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣಿ * ಸಂಖ್ಯೆ- 1800-425-909000 ಸಂಪರ್ಕಿಸಲು ಕೋರಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.