ನುಡಿದಂತೆ ನಡೆದ ಸರ್ಕಾರ ನಮ್ಮದು; ಉಪ ಸಭಾಪತಿ ರುದ್ರಪ್ಪ ಲಮಾಣಿ ಹೇಳಿಕೆ

Published on

ಹಾವೇರಿ: ಚುನಾವಣೆ ಸಮಯದಲ್ಲಿ ನೀಡಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದು ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಬುಧವಾರ ಆಯೋಜಿಸಿದ್ದ ಸಮಾರಂಭದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆ ಇಂದಿನಿಂದ ಜಾರಿಗೆ ಬರದಲಿದೆ. ಈ ಎಲ್ಲ ಯೋಜನೆಗಳು ಮಹಿಳೆಯರಿಗೆ ಆರ್ಥಿಕ ಭದ್ರತೆ ಹಾಗೂ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿವೆ ಎಂದರು.
ಗ್ಯಾರಂಟಿ ಯೋಜನೆಗಳ ಜಾರಿ ಅಸಾಧ್ಯ, ಎಲ್ಲವೂ ಸುಳ್ಳು ಭರವಸೆಗಳು, ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಕೆಲವರು ಟೀಕೆ ಮಾಡಿದ್ದರು. ಆದರೆ, ನಮ್ಮ ಸರ್ಕಾರ ಜನರಿಗೆ ನೀಡಿದ ಭರವಸೆಯಂತೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ನೂರಕ್ಕೆ ನೂರರಷ್ಟು ಅನುಷ್ಠಾನಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ದೇಶದಲ್ಲಿ ಯಾರೂ ಮಾಡದ ಯೋಜನೆಗಳನ್ನು ನಮ್ಮ ಸರ್ಕಾರ ಮಾಡಿದೆ. ಇದರಿಂದ ಗೊತ್ತಾಗುತ್ತದೆ ಯಾರು ಸುಳ್ಳು ಹೇಳುತ್ತಾರೆ, ಯಾರು ಸತ್ಯ ಹೇಳುತ್ತಾರೆ ಎಂದು ನಾವು ನುಡಿದಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಸೋನಿಯಾ ಗಾಂಧೀ ಹಾಗೂ ರಾಹುಲ ಗಾಂಧಿಯವರ ಕನಸಿನ ಕೂಸು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಶಶಿಕಲಾ ಮಾಳಗಿ, ರೇಣುಕಾ ಹೊಸಗೌಡ್ರ, ಯಲ್ಲಪ್ಪ ತಳವಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ, ತಹಶೀಲ್ದಾರ್ ಜಿ.ಶಂಕರ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ, ಎಸ್.ಎಫ್.ಎನ್.ಗಾಜಿಗೌಡ್ರ, ಸೋಮಣ್ಣ ಬೇವಿನಮರದ, ಎಂ.ಎಂ.ಮೈದೂರ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net