

ಹಾವೇರಿ: ನಗರದ ಪಿಬಿ ರಸ್ತೆಯ ಅಜ್ಜಯ್ಯನ ದೇವಸ್ಥಾನ ಮುಂಭಾಗದ ವಿಶಾಲವಾದ ಜಾಗೆಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಸೋಮವಾರ ಶಾಸಕ ನೆಹರು ಓಲೇಕಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲ ರೀತಿಯ ಸಹಕಾರ ಹಾಗೂ ಸೌಲಭ್ಯ ನೀಡುತ್ತಿದ್ದಾರೆ. ನಗರದಲ್ಲಿ ಹದಗೆಟ್ಟ ರಸ್ತೆಗಳ ನಿರ್ಮಾಣಕ್ಕಾಗಿ ಈ ಮೊದಲು 20 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮತ್ತೊಮ್ಮೆ ಕ್ರಿಯಾಯೋಜನೆ ತಯಾರಿಸಿದಾಗ ಅಂದಾಜು 27 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಅನುದಾನ ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಎಲ್ಲರೂ ಪಕ್ಷಾತೀತವಾಗಿ ಕೈಜೋಡಿಸುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಬಹಳ ವರ್ಷಗಳ ಬಳಿಕ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಹಾವೇರಿ ಜಿಲ್ಲೆಯ ಜನತೆಗೆ ಮುಕ್ತ ಅವಕಾಶ ಸಿಕ್ಕಿರುವುದು ಸಂತಸದ ವಿಷಯ. ಈ ಸಮ್ಮೇಳನಕ್ಕೆ ರಾಜ್ಯ, ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು, ಸಾಹಿತ್ಯಾಸಕ್ತರು ಆಗಮಿಸಲಿದ್ದಾರೆ. ಹಾವೇರಿಗೆ ಸಿಕ್ಕಿರುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಹೆಚ್ಚಿನ ಸಮಯವನ್ನು ಸಮ್ಮೇಳನದ ಕಾರ್ಯ ಚಟುವಟಿಕೆಗಳಿಗೆ ನೀಡಿ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ ಎಂದು ಜಿಲ್ಲಾಡಳಿತ ಮತ್ತು ಕಸಾಪ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಸಲಹೆ ನೀಡಿದರು.
ಸಮಾರಂಭದಲ್ಲಿ ಹೊಸಮಠದ ಶ್ರೀ ಬಸವ ಶಾಂತಲಿಂಗ ಸ್ವಾಮೀಜಿ, ಹರಸೂರ ಬಣ್ಣದ ಮಠದ ಶ್ರೀ ಅಭಿನವ ರುದ್ರ ಚನ್ನ ಮಲ್ಲಿಕಾರ್ಜುನ ಸ್ವಾಮೀಜಿ, ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ಕರ್ಜಗಿ ಗೌರಿಮಠದ ಶ್ರೀ ಶಿವಯೋಗಿ ಶಿವಚಾರ್ಯ ಸ್ವಾಮೀಜಿ, ನೆಗಳೂರು ಮಠದ ಶ್ರೀ ಗುರು ಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು
ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಬಸವರಾಜ ಶಿವಣ್ಣನವರ, ಮಾಜಿ ಶಾಸಕ ಶಿವರಾಜ ಸಜ್ಜನರ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಮ್ಮದ ರೋಷನ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಕಸಾಪ ತಾಲೂಕು ಅಧ್ಯಕ್ಷ ವೈ.ಬಿ.ಆಲದಕಟ್ಟಿ, ಮತ್ತಿತರರು ಪಾಲ್ಗೊಂಡಿದ್ದರು.