

ಹಾವೇರಿ: ರಾಜ್ಯದ ವಿಜ್ಞಾನ ಕೇಂದ್ರಗಳಲ್ಲಿ ಹೊಸ ಪ್ರದರ್ಶನಗಳನ್ನು ಅಳವಡಿಸಬೇಕಿದೆ. ವಿಜ್ಞಾನಿಗಳು, ಸಂಶೋಧಕರು ಹಾಗೂ ತಜ್ಞರ ಸಲಹೆಯನ್ನು ಪಡೆದುಕೊಂಡು ಇನ್ನಷ್ಟು ಅಭಿವೃದ್ದಿಗೊಳಿಸಲಾಗುವುದು. ಉತ್ತರ ಕರ್ನಾಟಕ ಭಾಗದ ಹಾವೇರಿ ಜಿಲ್ಲೆಯ ವಿಜ್ಞಾನ ಕೇಂದ್ರವನ್ನು ಪಿಲಿಕುಳ ನಿಸರ್ಗಧಾಮದ ರೀತಿಯಲ್ಲಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲೂ ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವಗಿರಿಯ ಡಿಸಿ ಕಚೇರಿ ಎದುರಿನ ಹಾವೇರಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ ಬುಧವಾರ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ರಾಜ್ಯದ ವಿದ್ಯಾರ್ಥಿಗಳು ಹಾಗೂ ಯುವ ಜನತೆಯಲ್ಲಿ ವೈಜ್ಞಾನಿಕ ಮನೋಭಾವ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿಯನ್ನು ಮೂಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ನಿರ್ಮಾಣ ಕಾಮಗಾರಿ ಮುಕ್ತಾಯದ ಹಂತದಲ್ಲಿವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಾಪಿಸುವುದು ನಮ್ಮ ಗುರಿಯಾಗಿದೆ ಎಂದರು.
ಹಾವೇರಿ ವಿಜ್ಞಾನ ಕೇಂದ್ರ ಸ್ಥಾಪನೆಗೆ 9 ಎಕರೆ 30 ಗುಂಟೆ ಜಾಗವನ್ನು ಮೀಸಲಿಡಲಾಗಿದೆ. ಇದರಲ್ಲಿ ಒಂದೂವರೆ ಎಕರೆ ಜಾಗದಲ್ಲಿ ಉತ್ತಮ ಕಟ್ಟಡವನ್ನು ನಿರ್ಮಿಸಲಾಗಿದೆ. ಉತ್ತಮ ಪರಿಕರಗಳನ್ನು ಹಾಗೂ ವಿಜ್ಞಾನದ ಬಗ್ಗೆ ಆಸಕ್ತಿ ಉಂಟುಮಾಡುವ ಪ್ರದರ್ಶನಗಳನ್ನು ಅಳವಡಿಸಲಾಗಿದೆ. ಇದನ್ನು ಇನ್ನೂ ಹೆಚ್ಚು ಆಕರ್ಷಣೀಯ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಹಾವೇರಿ ವಿಜ್ಞಾನ ಕೇಂದ್ರದಲ್ಲಿ ಬಯಾಲಜಿ ಹಾಗೂ ಮ್ಯಾಥಮೆಟಿಕ್ಸ್ ಲ್ಯಾಬ್ ಅಳವಡಿಸುವ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶಕುಮಾರ, ಇತರರು ಉಪಸ್ಥಿತರಿದ್ದರು.
ಬೌಂಡರಿ ಗುರುತಿಸಿ:
9 ಎಕರೆ 30 ಗುಂಟೆ ಜಾಗ ಒತ್ತುವರಿ ಆಗದಂತೆ ತಡೆಯುವ ನಿಟ್ಟಿನಲ್ಲಿ ಜಾಗದ ಬೌಂಡರಿ ಗುರುತಿಸುವಂತೆ ಜಿಲ್ಲಾಧಿಕಾರಿಯವರಿಗೆ ಸಚಿವರು ಸೂಚನೆ ನೀಡಿದರು.