

ಹಾವೇರಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹೀಲಿಂಗ್ ಅರ್ಥ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಜಿಲ್ಲೆಯ ವಿವಿಧೆಡೆಯಲ್ಲಿ ಜು.29ರಿಂದ ಆಗಸ್ಟ್ 1ರವರೆಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಾಗಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿಯಾಗಿ ಮುಕ್ತಾಯವಾಯಿತು.
ಸದಾ ಒತ್ತಡದ ಜೀವನದಲ್ಲಿರುವ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸುವುವಲ್ಲಿ ಅಸಹಾಯಕರಾಗಿರುತ್ತಾರೆ. ಜನರ ರಕ್ಷಣೆಯಲ್ಲಿ ತೊಡಗಿಸಿಕೊಂಡು ಆರೋಗ್ಯದ ಕಾಳಜಿ ಬಗ್ಗೆ ಹೆಚ್ಚಿನ ಒತ್ತು ನೀಡುವುದಿಲ್ಲ. ಹಾಗಾಗಿ, ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಂಶುಕುಮಾರ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಗೋಪಾಲ ಅವರ ಆದೇಶದ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಆರೋಗ್ಯ ಭಾಗ್ಯ ಯೋಜನೆಯಡಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಜು.29ರಂದು ಹಾವೇರಿ ಉಪ ವಿಭಾಗ, ಜು.30ರಂದು ರಾಣೆಬೆನ್ನೂರ, ಜು.31ರಂದು ಶಿಗ್ಗಾಂವಿ ಉಪ ವಿಭಾಗ ಮತ್ತು ಆ.1ರಂದು ಡಿಎಆರ್ ವಿಭಾಗಗಳಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 600ಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ಜಿಲ್ಲಾ ಕಚೇರಿ ಸಹಾಯಕ ಆಡಳಿತಾಧಿಕಾರಿ ಪರಮೇಶ್ವರ ಬಾಳಿಕಾಯಿ ಹಾಗೂ ಸಮಾಲೋಚಕಿ ಗಾಯತ್ರಿ ಹೆಗಡೆ ತಿಳಿಸಿದ್ದಾರೆ.