

ಹಾವೇರಿ: ರಾಜ್ಯದಲ್ಲಿ ಅಧಿಕಾರ ನಡೆಸಿದ ಎಲ್ಲ ಪಕ್ಷಗಳ ಎಲ್ಲ ಮುಖ್ಯಮಂತ್ರಿಗಳೂ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಹಾಗಾಗಿ, ದೇಶದಲ್ಲೇ ಶೈಕ್ಷಣಿಕ ಸೌಲಭ್ಯ ನೀಡುವಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಜಿಲ್ಲೆಯನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ 135ನೇ ಜನ್ಮದಿನೋತ್ಸವದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಸಿಎಂಗಳು ಶಾಲಾ ಮಕ್ಕಳಿಗೆ ಉಚಿತ ಪಠ್ಯ, ಸಮವಸ್ತ್ರ, ಸೈಕಲ್, ಬಿಸಿಯೂಟ, ಹಾಲು, ಮೊಟ್ಟೆ ಹೀಗೆ ಎಲ್ಲ ಸೌಕರ್ಯಗಳನ್ನು ನೀಡಿದ್ದಾರೆ. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಎಲ್ಲ ಸೌಲಭ್ಯಗಳೊಂದಿಗೆ ಶೂ ಕೂಡ ನೀಡುತ್ತಿದ್ದಾರೆ. ಶಿಕ್ಷಕರಾದ ನೀವು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಹೇಳಿದರು.
ಉಪನ್ಯಾಸಕರಾಗಿ ಭಾಗವಹಿಸಿದ್ದ ಇಳಕಲ್ ಜಾನಪದ ವಿದ್ವಾಂಸ ಡಾ.ಶಂಭು ಬಳಿಗಾರ ಮಾತನಾಡಿ, ವಿಜ್ಞಾನಿ, ವೈದ್ಯರು, ಇಂಜನೀಯರ್, ಪ್ರಧಾನಮಂತ್ರಿ ಹೀಗೆ ಅನೇಕರನ್ನು ತಯಾರಿಸುವ ಸಾಮರ್ಥ್ಯ ಶಿಕ್ಷಕರಲ್ಲಿದೆ. ಶಿಕ್ಷಕ ವೃತ್ತಿಯಲ್ಲಿರುವಾಗ ಹಾಗೂ ನಿವೃತ್ತಿಯ ನಂತರವೂ ಶಿಕ್ಷಕನಾಗಿರುತ್ತಾನೆ. ಜನಮೆಚ್ಚುವ ಶಿಕ್ಷಕನಾಗುವ ಬದಲು ಮನಸ್ಸು ಮೆಚ್ಚುವ ಶಿಕ್ಷಕನಾಗಬೇಕು. ಶಿಕ್ಷಕ ವೃತ್ತಿಯನ್ನು ಪ್ರೀತಿಸಬೇಕು ಹಾಗೂ ಮಕ್ಕಳಿಗೆ ತಿಳುವಂತೆ ಪಾಠ ಮಾಡಬೇಕು ಎಂದು ಹೇಳಿದರು.
ಸಂವಿಧಾನ ಪೀಠಿಕೆ ಬೋಧಿಸುವ ಮೂಲಕ ಜಿಲ್ಲೆಯ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಚಾಲನೆ ನೀಡಿದರು. ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು.
ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಿರೀಶ ಪದಕಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಡಿಡಿಪಿಯು ಡಾ.ಎಚ್.ಉಮೇಶಪ್ಪ, ತಹಶೀಲ್ದಾರ್ ಜಿ.ಶಂಕರ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಮಾಜಿ ಸಂಸದ ಐ.ಜಿ.ಸನದಿ, ಕೊಟ್ರೇಶಪ್ಪ ಬಸೇಗಣ್ಣಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಣ ಸಂಘನೆಯ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.
ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ
ಜಿಲ್ಲೆಯ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ತಲಾ ಏಳು ಶಿಕ್ಷಕರು ಸೇರಿದಂತೆ ಒಟ್ಟು 21 ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ನಿವೃತ್ತಿ ಹೊಂದಿದ ಶಿಕ್ಷಕರು ಮತ್ತು ನಿವೃತ್ತ ಯೋಧ ಕೊಟ್ರೇಶ ದೇಸಾಯಿ ಅವರನ್ನು ಸನ್ಮಾನಿಸಲಾಯಿತು.