

ಹಾವೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಹಾಗೂ ಹಾವೇರಿ ವಿಶ್ವದ್ಯಾಲಯ ಸಹಯೋಗದಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಒತ್ತು ನೀಡುವ ಮೂಲಕ ಪರಿಸರ ಸಂರಕ್ಷಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಇತ್ತೀಚೆಗೆ ತಾಲೂಕಿನ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದಲ್ಲಿ ಜರುಗಿತು.
ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಸಿ.ಜೆ.ಎಂ. ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ವಿ. ಉದ್ಘಾಟನೆ ನೆರವೇರಿಸಿದರು. ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾವೇರಿ ಪ್ರಾದೇಶಿಕ ಕಚೇರಿ ಪ್ರಾದೇಶಿಕ ಅಧಿಕಾರಿ ಡಾ.ಎಸ್.ಲಕ್ಷ್ಮೀಕಾಂತ ಅವರು ಪರಿಸರ ಸಂರಕ್ಷಣೆ ಕುರಿತು ಹಾಗೂ ನಗರಸಭೆ ಇಂಜನೀಯರ್ ಶಿವರಾಜ ಬಿ.ಕೆ. ಘನತ್ಯಾಜ್ಯ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಸ್.ಟಿ.ಬಾಗಲಕೋಟಿ, ಕುಲಚಿವರಾದ (ಮೌಲ್ಯಮಾಪನ) ಡಾ.ವಿಜಯಲಕ್ಷ್ಮೀ ತಿರ್ಲಾಪೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಮತಾ ಹೊಸಗೌಡರ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಇತರರು ಪಾಲ್ಗೊಂಡಿದ್ದರು.