

ಹಾವೇರಿ: ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ವಸ್ತು ಪ್ರದರ್ಶನದ ಮೂಲಕ ಅದ್ಬುತವಾಗಿ ಅನಾವರಣಗೊಳಿಸಲಾಗಿದೆ ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಲು ಈ ತರಹದ ವಸ್ತು ಪ್ರದರ್ಶನ ಮಳಿಗೆಗಳು ಸಹಕಾರಿಯಾಗಲಿವೆ ಎಂದರು.
ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿ, ಮಹಿಳೆ, ಮಧ್ಯಮವರ್ಗ, ವಿದ್ಯಾರ್ಥಿಗಳ ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆಗೆ ಹಾಗೂ ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ಹೇಳಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಜೀವನಮಟ್ಟ ಸುಧಾರಿಸಿದೆ. ದೇಶದ ಜಿಡಿಪಿ ಸಾಧನೆ ಕೊಡುಗೆಗೆ ರಾಜ್ಯ ಎರಡನೇ ಸ್ಥಾನದಲ್ಲಿದೆ. ಇದಕ್ಕೆ ಗ್ಯಾರಂಟಿ ಯೋಜನೆಗಳೇ ಕಾರಣವಾಗಿವೆ ಎಂದರು.
ವಸ್ತು ಪ್ರದರ್ಶನ ಮಳಿಗೆಯಲ್ಲಿ ಅನ್ನ ಭಾಗ್ಯ, ಶಕ್ತಿ, ಗೃಹ ಜ್ಯೋತಿ, ಯುವ ನಿಧಿ, ಪ್ರಗತಿಯತ್ತ ಕರ್ನಾಟಕ, ಸಿರಿಗನ್ನಡಂ ಗೆಲ್ಗೆ, ಗ್ಯಾರಂಟಿ ಬದುಕು, ಇಂದಿರಾ ಕ್ಯಾಂಟಿನ್, ಇತರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಪ್ರವೇಶ ದ್ವಾರದಲ್ಲಿ ಗ್ಯಾರಂಟಿ ಯೋಜನೆಗಳ ಪುಸ್ತಕ ಕೈಯಲ್ಲಿ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಮೆ ಗಮನ ಸೆಳೆಯುತ್ತದೆ. ಜು.9ರವರೆಗೆ ಪ್ರದರ್ಶನ ಇರಲಿದೆ.
ಜಿಲ್ಲಾ ವಾರ್ತಾಧಿಕಾರಿ ಭಾರತಿ ಭಜಂತ್ರಿ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಹಿರೇಮಠ, ತಾಲೂಕು ಅಧ್ಯಕ್ಷ ಎಂ.ಎಂ.ಮೈದೂರು, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಕೆಎಸ್‌ಆರ್‌ಟಿಸಿ ಡಿಸಿ ವಿಜಯಕುಮಾರ, ಕೆ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ನಗರಸಭೆ ವಿವಿಧ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.