

ಹಾವೇರಿ: ಮೊಬೈಲ್ ಬಳಕೆ ಕಡಿಮೆ ಮಾಡಿ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡಾಗ ಖಿನ್ನತೆ, ಮತ್ತಿತರ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಲಮುಕುಂದ ಮುತಾಲಿಕದೇಸಾಯಿ ಯುವಜನತೆಗೆ ಕಿವಿಮಾತು ಹೇಳಿದರು.
ನಗರದ ಕೆ.ಎಲ್.ಇ. ಶಾಲೆಯಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕೆಎಲ್‌ಇ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸಹಯೋಗದಲ್ಲಿ ಆಯೋಜಿಸಿದ್ದ ‘ವಿಶ್ವ ಆತ್ಮಹತ್ಯೆ ತಡೆಗುಟ್ಟುವ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವ ಜನತೆಗೆ ಹಾಗೂ ಮಕ್ಕಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವುದು ವಿಷಾದದ ಸಂಗತಿಯಾಗಿದೆ. ಯುವಜನತೆ ಹಾಗೂ ವಿದ್ಯಾರ್ಥಿಗಳು ಉತ್ತಮ ಪುಸ್ತಕಗಳನ್ನು ಓದುವ, ಕ್ರೀಡೆ, ಚಿತ್ರಕಲೆ, ಸಂಗೀತ ಹೀಗೆ ವಿವಿಧ ಚಟುವಟಿಕೆಗಳನ್ನು ತೊಡಗಿಸಿಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯ ಡಾ.ವಿಜಯಕುಮಾರ ಆತ್ಮಹತ್ಯೆ ತಡೆಗಟ್ಟುವ ಮತ್ತು ಮಾನಸಿಕ ರೋಗದ ಲಕ್ಷಣಗಳ ಕುರಿತು ಉಪನ್ಯಾಸ ನೀಡಿದರು.
ಕೆ.ಎಲ್.ಇ. ಶಾಲೆ ಪ್ರಾಂಶುಪಾಲೆ ಸಪ್ನಾ ಆರ್.ಲೋಬೋ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚನಬಸಯ್ಯ ವಿರಕ್ತಮಠ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರು, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಉಮೇಶ ಕರಮುಡಿ, ಇತರರು ಭಾಗವಹಿಸಿದ್ದರು.