ಗ್ಯಾರಂಟಿಗಳನ್ನು ಜಾರಿಗೊಳಿಸದಿದ್ದರೆ ಹೋರಾಟ; ಮಾಜಿ ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ ‌

BC Patil
Published on

ಹಾವೇರಿ: ಕಾಂಗ್ರೆಸ್ ಸುಳ್ಳು ಭರವಸೆ ನೀಡಿ, ಗ್ಯಾರಂಟಿ ಕಾಡ್೯ ನೀಡಿ ಅಧಿಕಾರಕ್ಕೆ ಬಂದ ಬಳಿಕ ಈಗ ಗ್ಯಾರಂಟಿ ಜಾರಿಗೊಳಿಸದೇ ಜನರಿಗೆ ಮೋಸ ಮಾಡುತ್ತಿದೆ. ಗ್ಯಾರಂಟಿಗಳನ್ನು ಜಾರಿಗೊಳಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ ‌ನೀಡಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಗ್ಯಾರಂಟಿ ಜಾರಿಗೊಳಿಸುತ್ತೇವೆ ಎಂದಿದ್ದರು. ಈಗ ಷರತ್ತಿನ ಮಾತನಾಡುತ್ತಿದ್ದಾರೆ.

ಈ ಗ್ಯಾರಂಟಿಗಳನ್ನು ಜಾರಿಗೊಳಿಸಲು ವರ್ಷಕ್ಕೆ 54,200 ಕೋಟಿ‌ ರೂ. ಬೇಕು. ಆರ್ಥಿಕ ತಜ್ಞರಾದ ಸಿದ್ದರಾಮಯ್ಯ ಅವರು ಇದನ್ನೆಲ್ಲ ಲೆಕ್ಕಾಚಾರ ಹಾಕದೇ ಯಾಕೆ ಆಶ್ವಾಸನೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ಇದರಿಂದ ಅಭಿವೃದ್ಧಿ ಕೆಲಸಗಳು ನಿಂತು ಹೋಗುತ್ತವೆ ಎಂದರು.

ಪಕ್ಷ ಸೂಚಿಸಿದರೆ ಲೋಕಸಭೆಗೆ ಸ್ಪರ್ಧಿಸುವುದಾಗಿ ಬಿ.ಸಿ.ಪಾಟೀಲ ಹೇಳಿದರು.

ಈ ವೇಳೆ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಮಾಜಿ ಶಾಸಕ ಶಿವರಾಜ ಸಜ್ಜನರ, ಗವಿಸಿದ್ದಪ್ಪ ದ್ಯಾಮಣ್ಣವರ, ಪ್ರಭು ಹಿಟ್ನಳ್ಳಿ, ಹಾವೇರಿ ಗ್ರಾಮೀಣ ಮಂಡಲದ ಅಧ್ಯಕ್ಷ ಬಸವರಾಜ ಕಳಸೂರ, ಹಿರೇಕೆರೂರು ಮಂಡಲದ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಇತರರಿದ್ದರು.

ಲೋಕಸಭೆಗೆ ಸ್ಪರ್ಧಿಸಲು ಸಿದ್ಧ

ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದು ನಿಜ. ಆದರೆ, ಕಾರ್ಯಕರ್ತರು ಬಹಳ ಒತ್ತಾಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಚುನಾವಣೆ ಎದುರಿಸಲು ತೀರ್ಮಾನಿಸಿದ್ದೇನೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಮ್ಮ ಹೆಸರು ಕೇಳಿ ಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಬಿ.ಸಿ. ಪಾಟೀಲರು, ಪಕ್ಷದ ವರಿಷ್ಠರು ಸೂಚಿಸಿದರೆ ಖಂಡಿತ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net