

ಹಾವೇರಿ: ಇತ್ತೀಚೆಗೆ 16ರಿಂದ 18 ವಯಸ್ಸಿನ ಮಕ್ಕಳು ಹೆಚ್ಚಾಗಿ ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದು, ಏಪ್ರಿಲ್‌ನಿಂದ ಜೂನ್-2024ರವರೆಗೆ ಆರ್.ಸಿ.ಎಚ್. ಪೋರ್ಟಲ್ ಪ್ರಕಾರ 176 ಅಪ್ರಾಪ್ತ ಗರ್ಭಿಣಿಯರು ಪತ್ತೆಯಾಗಿದ್ದಾರೆ. ಹಾಗಾಗಿ, 16ರಿಂದ 18 ವರ್ಷದ ವಯಸ್ಸಿನ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಶನಿವಾರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗಾಗಿ (ಸಿಆರ್‌ಪಿ) ಆಯೋಜಿಸಿದ್ದ ಬಾಲನ್ಯಾಯ ಕಾಯ್ದೆ-2015, ತಿದ್ದುಪಡಿ ಕಾಯ್ದೆ-2021, ಪೋಕ್ಸೋ ಕಾಯ್ದೆ-2012, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ತಿದ್ದುಪಡಿ ಕಾಯ್ದೆ-2008ರ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹಗಳನ್ನು ತಡೆಯುವ ಮೂಲಕ ಅವರಿಗೆ ಶಿಕ್ಷಣ ನೀಡಿ, ಸಮಾಜದಲ್ಲಿ ಉನ್ನತ ವ್ಯಕ್ತಿಗಳನ್ನಾಗಿ ಮಾಡುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಸಮುದಾಯದವರಿಗೆ ಮತ್ತು ಮಕ್ಕಳಿಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ. ಮಕ್ಕಳಿಗೆ ಬಾಲ್ಯವನ್ನು ಅನುಭವಿಸುವದಕ್ಕೆ ಅವಕಾಶ ಕಲ್ಪಿಸಿಕೊಡಿ, ಇತ್ತೀಚಿನ ದಿನಮಾನದಲ್ಲಿ ಅಪ್ರಾಪ್ತ ತಾಯಂದಿರು ಹೆಚ್ಚಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಹೆಣ್ಣು ಮಕ್ಕಳಿಗೆ ಕಿಶೋರಾವಸ್ಥೆಯಲ್ಲಿ ಬಾಲ್ಯ ವಿವಾಹ ಮಾಡುವದರಿಂದ ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳವಣಿಯಾಗಿರುವುದಿಲ್ಲ. ಇದರಿಂದ ಜನಿಸುವ ಮಕ್ಕಳಲ್ಲಿ ಅಪೌಷ್ಠಿಕತೆ ಮತ್ತು ಅನೀಮಿಯಾ ಸಮಸ್ಯೆ ಕಾಡುವ ಸಾಧ್ಯತೆ ಇರುತ್ತದೆ. ತಾಯಂದಿರ ಮತ್ತು ಶಿಶು ಮರಣ ಸಂಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಜವಾಬ್ದಾರಿಯುತ ಕಾರ್ಯವಾಗಿದೆ. ಸಮೂಹ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ) ಈ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು. ಮಕ್ಕಳ ಶಿಕ್ಷಣ ಹಾಗೂ ಇತರೆ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಜೀದ್ ಎಸ್.ಎಚ್., ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಹುಗ್ಗಿ, ತಾಲೂಕು ವೈದ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಜಿಲ್ಲೆಯ ಸಮೂಹ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.
29 ಪೋಕ್ಸೋ ಕೇಸ್
ಈ ವರ್ಷ ಏಪ್ರಿಲ್‌ನಿಂದ ಜೂನ್‌ವರೆಗೆ 29 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 13 ಅಪ್ರಾಪ್ತ ಗರ್ಭಿಣಿಯರಿದ್ದಾರೆ. 24 ಬಾಲ್ಯ ವಿವಾಹಗಳನ್ನು ತಡೆಯಲಾಗಿದ್ದು, ಎರಡು ಬಾಲ್ಯ ವಿವಾಹ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಹೇಳಿದರು.