193 ಗ್ರಾಮಗಳಲ್ಲಿ ನೀರಿಗೆ ಬರ ಸಾಧ್ಯತೆ; 28 ಊರುಗಳಲ್ಲಿ ಹೆಚ್ಚು ಸಮಸ್ಯೆ; ಜಿಪಂ ಸಿಇಒ ಅಕ್ಷಯ ಶ್ರೀಧರ

26 HVR 4
Published on

ಹಾವೇರಿ: ಜಿಲ್ಲೆಯ 193 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸುವ ಸಾಧ್ಯತೆ ಇದ್ದು, ಈ ಪೈಕಿ ಅತಿ ಹೆಚ್ಚು ಕುಡಿಯುವ ನೀರಿನ ಸಮಸ್ಯೆ ಇರುವ 28 ಗ್ರಾಮಗಳಲ್ಲಿ ಖಾಸಗಿ ವ್ಯಕ್ತಿಗಳಿಂದ ಬಾಡಿಗೆ ಮೂಲಕ ಕೊಳವೆಬಾವಿ ಪಡೆದು ನೀರು ಪೂರೈಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಹೇಳಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಮಸ್ಯೆ ಉಂಟಾಗುವ ಗ್ರಾಮಗಳಲ್ಲಿ ಖಾಸಗಿ ವ್ಯಕ್ತಿಗಳಿಂದ ಬಾಡಿಗೆ ಮೂಲಕ ಕೊಳವೆಬಾವಿಗಳಿಂದ ನೀರು ಪಡೆಯುವ ಮೂಲಕ ಕುಡಿಯುವ ನೀರು ಪೂರೈಕೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ನೀರಿನ ಸಮಸ್ಯೆ ಹೆಚ್ಚಾಗಿರುವ 28 ಗ್ರಾಮಗಳಲ್ಲಿ 38 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ, ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರಂತರ ಸಭೆಗಳು ಹಾಗೂ ವಿಡಿಯೋ ಸಂವಾದಗಳನ್ನು ಏರ್ಪಡಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಕ್ರಮ ಕೈಕೊಳ್ಳಲಾಗಿದೆ. ಸಾರ್ವಜನಿಕರಿಗೆ ಕುಡಿಯುವ ನೀರಿನ ಕುರಿತು ಜಾಗೃತಿ ಮೂಡಿಸಲು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೂ ಯಾವುದೇ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಉದ್ಭವಿಸಿರುವದಿಲ್ಲ. ಅತಿ ಅಗತ್ಯ ಇರುವ ಕಡೆ ಮಾತ್ರ ಏಪ್ರಿಲ್-2023ರಿಂದ ಈವರೆಗೆ 79 ಕೊಳವೆಬಾವಿಗಳನ್ನು ಕೊರೆಸಲಾಗಿದೆ. ಗ್ರಾಮೀಣ ಭಾಗದಲ್ಲಿ 3,500 ಕಾರ್ಯಾತ್ಮಕ ಜಲ ಮೂಲಗಳಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಎಲ್ಲ 3,500 ಜಲಮೂಲಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ. ಈ ಕಾರ್ಯವನ್ನು ಅಭಿಯಾನದ ರೀತಿಯಲ್ಲಿ ಮಾಡಲು ಸೂಚಿಸಲಾಗಿದೆ ಎಂದರು.
ಗ್ರಾಮೀಣ ಪ್ರದೇಶದ ಎಲ್ಲ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಕುಡಿಯಲು ಹಾಗೂ ಅಡುಗೆ ಮಾಡಲು ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಉಚಿತವಾಗಿ ನೀರು ಪೂರೈಸಲು ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ. ಕುಡಿಯುವ ನೀರಿನ ಶುದ್ಧತೆ ಪರೀಕ್ಷಿಸಲು ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಎಫ್‌ಟಿಕೆ ಕಿಟ್‌ಗಳನ್ನು ಪೂರೈಸಲಾಗಿದೆ. ಗ್ರಾಮ ಪಂಚಾಯತಿಗಳು ತಕ್ಷಣ ತಮ್ಮ ವ್ಯಾಪ್ತಿಯ ಜಲ ಮೂಲಗಳನ್ನು ಪರೀಕ್ಷಿಸಬೇಕು. ಈ ಪರೀಕ್ಷೆಯಲ್ಲಿ ಏನಾದರೂ ಕಲುಷಿತತೆ ಕಂಡುಬಂದರೆ ಗ್ರಾಮ ಪಂಚಾಯಿತಿಗಳು ಆ ನೀರಿನ ಮಾದರಿಯನ್ನು ತಕ್ಷಣ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಯೋಗಾಲಯಗಳಿಗೆ ಕಳುಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿಬ್ಬಂದಿ, ಇತರರಿದ್ದರು.

ಜಲಾಗಾರ ಸ್ವಚ್ಛಗೊಳಿಸಿ
ಗ್ರಾಮೀಣ ಪ್ರದೇಶಗಳಲ್ಲಿ 1,607 ಮೇಲ್ಮಟ್ಟದ ಜಲಾಗಾರಗಳಿದ್ದು, ಇವುಗಳನ್ನು ಸ್ವಚ್ಛಗೊಳಿಸಲು ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಯಾವುದಾದರೂ ನೀರಿನ ಮೂಲ ಕಲುಷಿತಗೊಂಡಿದ್ದರೆ ತಕ್ಷಣ ಸಾರ್ವಜನಿಕರು ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಮಾಹಿತಿ ನೀಡಬೇಕು. ಅದನ್ನು ಸರಿಪಡಿಸಲು ತಕ್ಷಣ ಗ್ರಾಮ ಪಂಚಾಯಿತಿಗಳು ಕ್ರಮವಹಿಸಬೇಕು. ನಿರ್ಲಕ್ಷ್ಯತೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಯೇ ನೇರ ಹೊಣೆ ಮಾಡಲಾಗುವುದು ಎಂದು ಜಿಪಂ ಸಿಇಒ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net