ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಾಗಾರ 10ರಂದು; ಯಶೋಗಾಥೆ ಹಂಚಿಕೊಳ್ಳಲು ಫಲಾನುಭವಿಗಳನ್ನು ಆಯ್ಕೆ ಮಾಡಿ; ಜಿಪಂ ಸಿಇಒ ರುಚಿ ಬಿಂದಲ್ ಸೂಚನೆ

4 HVR 8
Published on

ಹಾವೇರಿ: ಜಿಲ್ಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನೆ ಜಿಲ್ಲಾಮಟ್ಟದ ಸಭೆಯನ್ನು ಸೆಪ್ಟೆಂಬರ್ 10ರಂದು ಬೆಳಿಗ್ಗೆ 10.30 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರುಚಿ ಬಿಂದಲ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಮಟ್ಟದ ಕಾರ್ಯಾಗಾರವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಇತರೆ ಇಲಾಖೆಗಳು ಸಮನ್ವಯದೊಂದಿಗೆ ಕೆಲಸ ನಿರ್ವಹಿಸಬೇಕು. ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಂದ ಯಶೋಗಾಥೆ ಹಂಚಿಕೊಳ್ಳಲು ಫಲಾನುಭವಿಗಳನ್ನು ಪ್ರತಿ ಯೋಜನೆಗೆ ಇಬ್ಬರನ್ನು ಆಯ್ಕೆ ಮಾಡಿ, ಕಾರ್ಯಾಗಾರಕ್ಕೆ ಕರೆತರುವುದು ಆಯಾ ಇಲಾಖೆಯ ಮುಖ್ಯಸ್ಥರ ಜವಾಬ್ದಾರಿ ಎಂದರು.

ಸಭಾಂಗಣದ ಸಿದ್ಧತೆ ಮತ್ತು ಸಕಲ ವ್ಯವಸ್ಥೆ ಮಾಡಿಕೊಳ್ಳಬೇಕು. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಕಲಾ ತಂಡಗಳ ಮೂಲಕ ನಾಟಕ ಪ್ರದರ್ಶನ ಹಾಗೂ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಶಾಲಾ ಮಕ್ಕಳಿಂದ ನೃತ್ಯ ಸಂಯೋಜನೆ ಏರ್ಪಡಿಸಿ ಕಾರ್ಯಕ್ರಮದ ಮೆರಗು ಹೆಚ್ಚಿಸುವುದು, ಕಾರ್ಯಾಗಾರಕ್ಕೆ ಆಗಮಿಸುವ ಗ್ಯಾರಂಟಿ ಯೋಜನೆ ಫಲಾನುಭವಿಗಳು ಹಾಗೂ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಯಾವುದೇ ಲೋಪಗಳಾಗದಂತೆ ಎಚ್ಚರಿಕೆ ವಹಿಸಲು ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್, ಡಿಟಿಒ ಅಶೋಕ ಪಾಟೀಲ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net