

ಹಾವೇರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಬುಧವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ಧರಣಿ ಆರಂಭಿಸಲಾಯಿತು.
ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ರಾಜ್ಯದ ಜನರ ವಿಶ್ವಾಸಕ್ಕೆ ಧಕ್ಕೆ ತಂದಿರುವ ಗಂಭೀರ ಪ್ರಕರಣವಾಗಿದೆ. ಬಡವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ ಹಣ ದುರ್ಬಳಕೆಯಾಗಿರುವುದು ಖಂಡನೀಯ.
ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಅಕ್ರಮವಾಗಿ ವರ್ಗಾವಣೆಯಾದ ಪ್ರತಿಯೊಂದು ರೂಪಾಯಿಯನ್ನೂ ಸರ್ಕಾರದ ಬೊಕ್ಕಸಕ್ಕೆ ಮರಳಿ ತರಬೇಕು. ಮುಖ್ಯವಾಗಿ ಪ್ರಕರಣದ ಮೂಲ ರೂವಾರಿಯಾಗಿರುವ ಬಿ. ನಾಗೇಂದ್ರ ಅವರನ್ನು ಡಿ.ಕೆ. ಶಿವಕುಮಾರ ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಇದು ಖಂಡನೀಯ. ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ದುರ್ಬಳಕೆ ನಡೆದಿರುವ ಆರೋಪಗಳು ಸರ್ಕಾರದ ಆಡಳಿತ ವೈಖರಿಯನ್ನೇ ಪ್ರಶ್ನಿಸುವಂತಿವೆ. ನೈತಿಕ ಹೊಣೆ ಹೊತ್ತು ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ನೈತಿಕತೆ ಇದ್ದರೆ ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೊಣೆಗಾರಿಕೆ ನಿಗದಿಪಡಿಸಿ, ಸಾರ್ವಜನಿಕರ ಹಣವನ್ನು ಸರ್ಕಾರದ ಬೊಕ್ಕಸಕ್ಕೆ ವಾಪಸ್ ತರಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಮೀಸಲಾದ ಹಣ ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ಬಳಕೆಯಾಗಬಾರದು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳುವ ಸರ್ಕಾರ ಆರೋಪಗಳ ಬಗ್ಗೆ ಜನರಿಗೆ ಸ್ಪಷ್ಟ ಉತ್ತರ ನೀಡಬೇಕು. ಹಣ ವಾಪಸ್ ಪಡೆದು ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಪಕ್ಷದ ನಗರ ಘಟಕದ ಅಧ್ಯಕ್ಷ ಕಿರಣ ಕೊಳ್ಳಿ, ಗ್ರಾಮೀಣ ಅಧ್ಯಕ್ಷ ಮಾರುತಿ ಗೊರವರ, ಬಸವರಾಜ ಕೋಳಿವಾಡ, ರೈತ ಮೋರ್ಚಾ ಉಪಾಧ್ಯಕ್ಷ ಮೃತ್ಯುಂಜಯ ಮುಷ್ಠಿ, ಸಂತೋಷ ಆಲದಕಟ್ಟಿ, ನೀಲಪ್ಪ ಚಾವಡಿ, ನಿರಂಜನ ಹೇರೂರ, ನಂಜುಂಡೇಶ ಕಳ್ಳೇರ, ಕಿರಣಕುಮಾರ ಕೋಣನವರ, ವಿಜಯಕುಮಾರ ಚಿನ್ನಿಕಟ್ಟಿ, ಬಸವರಾಜ ಕಳಸೂರ ಸೇರಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.