

ಹಾವೇರಿ: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಸಮೀಪದ ನಿಸರ್ಗ ಡಾಬಾ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ.
ಮೃತರನ್ನು ದಾವಣಗೆರೆ ನಗರದ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾಬಾಯಿ (51) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಕಶ್ವಶ್ರೀ ಎಂಬ ಮಗು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ರವಾನಿಸಲಾಗಿದೆ.
ರಾಣೆಬೆನ್ನೂರಿನಿಂದ ದಾವಣಗೆರೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಳಗೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದು ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಘಟನೆ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.