

ರಾಣೆಬೆನ್ನೂರ: ಒಂದನೇ ಪತ್ನಿ ಹೆರಿಗೆಗೆ ಹೋದಾಗ ಎರಡನೇ ಮದುವೆಯಾಗಿದ್ದ ಪತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 8 ಸಾವಿರ ರೂ. ದಂಡ ವಿಧಿಸಿ ಇಲ್ಲಿಯ 2ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಹಿರಿಯ ವಿಭಾಗದ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಮಹಾಂತೇಶ ಭೂಸಗೋಳ ಶುಕ್ರವಾರ ತೀರ್ಪು ನೀಡಿ ಆದೇಶಿಸಿದ್ದಾರೆ.
ನಗರದ ಶೇಖರ ಸಹದೇವಪ್ಪ ಅಂಬಿಗೇರ (48) ಶಿಕ್ಷೆಗೆ ಒಳಗಾದ ಅಪರಾಧಿ.
ಈತ ತನ್ನ ಮೊದಲನೇ ಪತ್ನಿ ಹೆರಿಗೆಗೆ ಹೋದಾಗ ಮತ್ತೊಬ್ಬಳನ್ನು ಮದುವೆ ಮಾಡಿಕೊಂಡಿದ್ದ. ಇದನ್ನು ಪ್ರಶ್ನಿಸಿದ ಮೊದಲ ಪತ್ನಿ ಮೇಲೆ ಹಲ್ಲೆ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿದ್ದ. ಈ ಕುರಿತು ಮೊದಲ ಪತ್ನಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಪ್ರಭು ಕೆಳಗಿನಮನಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಸಮೇತ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು, ಹಲ್ಲೆ ಮಾಡಿದ ವಿಚಾರಕ್ಕೆ 2 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ.ದಂಡ ಹಾಗೂ ಎರಡನೇ ಮದುವೆಯಾದ ವಿಚಾರಕ್ಕೆ 3 ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಸಂತೋಷಕುಮಾರ್ ಎಸ್.ಎಂ. ವಾದ ಮಂಡಿಸಿದ್ದರು.