

ಹಾವೇರಿ: ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಲು ಆಗ್ರಹಿಸಿ ಹಾಗೂ ರೈತರ ಸಾಲ ಮನ್ನಾ, ಬೆಳೆ ವಿಮೆ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನೇತೃತ್ವ ವಹಿಸಿದ್ದ ರೈತ ಸಂದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ಕಳೆದ ಮೂ-ರ್ನಾಲ್ಕು ವರ್ಷಗಳಿಂದ ಅತಿವೃಷ್ಟಿ ಹಾಗೂ ಬರಗಾಲದಂತಹ ಪ್ರಕೃತಿ ವೈಪರೀತ್ಯಗಳಿಗೆ ತುತ್ತಾಗಿರುವ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವರ್ಷ ಮುಂಗಾರು ಮಳೆಯ ವೈಫಲ್ಯದಿಂದ ರೈತರು ಎರಡೆರಡು ಬಾರಿ ಬಿತ್ತನೆ ಮಾಡಬೇಕಾಗಿ ಬಂದಿದ್ದು, ಹೆಚ್ಚಿನ ಸಾಲದ ಹೊರೆ ಎದುರಿಸುವಂತಾಗಿದೆ. ಸಾಲದ ಒತ್ತಡದಿಂದ ರೈತರು ಆತ್ಮಹತ್ಯೆಯಂತಹ ದಾರಿ ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಕೂಡಲೇ ಜಿಲ್ಲೆಯ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.56ರಷ್ಟು ಮಳೆ ಕೊರತೆಯಾಗಿದ್ದು, ಕೆರೆ-ಕಟ್ಟೆಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಕೊಳವೆಬಾವಿಗಳ ಅಂತರ್ಜಲ ಮಟ್ಟ ಕುಸಿದು ಹಲವು ಬೋರ್ವೆಲ್ಗಳು ಬತ್ತಿಹೋಗಿವೆ. ಜಲಾಶಯಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಜುಲೈ ತಿಂಗಳಲ್ಲಿಯೂ ನಿರೀಕ್ಷಿತ ಮಳೆಯಾಗದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾದರೂ ಈಗಾಗಲೇ ಹಾನಿಗೊಳಗಾಗಿರುವ ಬೆಳೆಗಳು ಚೇತರಿಸಿಕೊಳ್ಳುವುದು ಕಷ್ಟಕರವಾಗಿದೆ ಎಂದು ಅಳಲು ತೋಡಿಕೊಂಡರು.
ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆ ಎದುರಾಗುವ ಆತಂಕವೂ ಇದೆ. ಹೀಗಾಗಿ ಸರ್ಕಾರ ಕೂಡಲೇ ಹಾವೇರಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಒದಗಿಸುವ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತ ಮುಖಂಡರಾದ ಮಲ್ಲಿಕಾರ್ಜುನ ಬಳ್ಳಾರಿ, ಎಚ್.ಎಚ್. ಮುಲ್ಲಾ, ಮಾಲತೇಶ ಪೂಜಾರ, ಶಿವಯೋಗಿ ಹೊಸಗೌಡ್ರ, ಶಿವಬಸಪ್ಪ ಗೋವಿ, ಶಂಕ್ರಣ್ಣ ಶಿರಗಂಬಿ, ಮರಿಗೌಡ ಪಾಟೀಲ, ಗಂಗಾಧರ ಎಲಿ, ಅಡಿವೆಪ್ಪ ಆಲದಕಟ್ಟಿ, ಬಸನಗೌಡ ಗಂಗಪ್ಪನವ, ಗುಡ್ಡನಗೌಡ ಪ್ಯಾಟಿಗೌಡ್ರ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.