ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ವಹಿಸಿ; 9ನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ; ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಸೂಚನೆ

haveri, Animal Dept, Kalubayi Roga, Vaccine, DC Meeting,
haveri, Animal Dept, Kalubayi Roga, Vaccine, DC Meeting,
Published on
ಹಾವೇರಿ: ಜಾನುವಾರುಗಳು ರೈತನ ಬೆನ್ನೆಲುಬು, ಅವುಗಳ ರಕ್ಷಣೆಗೆ ಕಾಲ ಕಾಲಕ್ಕೆ ಲಸಿಕೆ ಹಾಕುವ ಮೂಲಕ ಮತ್ತು ರೋಗ ಪೀಡಿತ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಮೂಲಕ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಇಲ್ಲಿನ ಹೊರವಲಯ ದೇವಗಿರಿಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ಹಾವೇರಿ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಲು ಬಾಯಿ ಬೇನೆ ರೋಗವು ಜಾನುವಾರುಗಳಿಗೆ ಮಾರಕವಾಗಿದ್ದು, ನಮ್ಮ ದೇಶದಿಂದ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಾರ್ಷಿಕವಾಗಿ ಎರಡು ಬಾರಿ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ರೋಗದ ನಿರ್ಮೂಲನೆಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯೊಂದಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಹೀಗಾಗಿ, ಸಂಬಂಧಿಸಿದ ಇತರೆ ಇಲಾಖೆಗಳು ಪಶುಪಾಲನಾ ಇಲಾಖೆಯೊಂದಿಗೆ ಕೈಜೋಡಿಸಿ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಕರೆ ನೀಡಿದರು.
ಲಸಿಕೆಗೆ ಅರ್ಹವಿರುವ ಜಾನುವಾರುಗಳಿಗೆ ಪ್ರತಿಶತ 100ರಷ್ಟು ಲಸಿಕೆ ಹಾಕುವ ಕಾರ್ಯವನ್ನು ನಿಗಧಿಪಡಿಸಿದ 30 ದಿನಗಳ ಅವಧಿಯಲ್ಲಿಯೇ ಕೈಗೊಂಡು, ಪೂರ್ಣಗೊಳಿಸಲು ಎಲ್ಲ ಅಧಿಕಾರಿಗಳು ಸನ್ನದ್ದರಾಗಿರಬೇಕೆಂದು ಸೂಚಿಸಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಯಲಿ ಮಾತನಾಡಿ, ಲಸಿಕಾ ಅಭಿಯಾನಕ್ಕಾಗಿ ಒಟ್ಟು 171 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಲಸಿಕಾ ವೇಳಾ ಪಟ್ಟಿ ಮತ್ತು ಜಾನುವಾರು ಹೊಂದಿರುವ ರೈತರ ಮಾಹಿತಿಯನ್ನು ಗ್ರಾಮವಾರು ತಯಾರಿಸಲಾಗಿದೆ. ಅದರಲ್ಲಿ ಗ್ರಾಮಗಳ ಹೆಸರು, ಜಾನುವಾರುಗಳ ಸಂಖ್ಯೆ, ಜಾನುವಾರು ಮಾಲೀಕರ ಹೆಸರು, ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ, ಲಸಿಕಾದಾರರ ವಿವರ ಹಾಗೂ ಜಾನುವಾರುಗಳ ಕಿವಿಓಲೆ ಸಂಖ್ಯೆ ವಿವರಗಳು ಲಭ್ಯವಿರುತ್ತವೆ. ಪ್ರತಿ ಗ್ರಾಮ ಅಥವಾ ನಗರ ಪ್ರದೇಶವನ್ನು 100ರಿಂದ 120 ಜಾನುವಾರುಗಳಿಗೆ ಒಂದು ಬ್ಲಾಕ್ ಎಂದು ವರ್ಗೀಕರಿಸಿ ಒಟ್ಟು 2,952 ಬ್ಲಾಕ್‌ಗಳಲ್ಲಿ ಲಸಿಕಾದಾರರು ಲಸಿಕೆಯನ್ನು ಹಾಕಲಿದ್ದಾರೆ. ಪ್ರತಿ ಜಾನುವಾರಿಗೆ ಒಂದರಂತೆ ಸೀರಿಂಜ್ ಉಪಯೋಗಿಸಿ ಲಸಿಕೆ ನೀಡಲಿದ್ದಾರೆ ಎಂಬ ಮಾಹಿತಿಯನ್ನು ಸಭೆಗೆ ವಿವರಿಸಿದರು.
ಲಸಿಕಾ ಕಾರ್ಯಕ್ರಮಕ್ಕೆ ಹಾವೇರಿ ಹಾಲು ಒಕ್ಕೂಟದ ಸಿಬ್ಬಂದಿ ಸಹಕಾರವನ್ನು ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಡಿಸಿ ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಯೋಜನಾ ನಿರ್ದೇಶಕ ಚಂದ್ರಪ್ಪ, ಲಸಿಕಾ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಅಧಿಕಾರಿ ಡಾ.ಕಿರಣ ಕೊಪ್ಪದ, ಎಲ್ಲ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾವೇರಿ ಹಾಲು ಒಕ್ಕೂಟ, ಜಿಲ್ಲಾ ಪಾಲಿಕ್ಲಿನಿಕ್ ಅಧಿಕಾರಿಗಳು ಉಪಸ್ಥಿತರಿದ್ದರು.
2.92 ಲಕ್ಷ ಜಾನುವಾರು
ಮಾತನಾಡಿ, ಏಪ್ರಿಲ್ 23ರಿಂದ ಮೇ 22ರವರೆಗೆ ಕಾಲು ಬಾಯಿ ಬೇನೆ ಲಸಿಕಾ ಕಾರ್ಯಕ್ರಮ ಜರುಗಲಿದೆ. ಜಿಲ್ಲೆಯಲ್ಲಿ ಕೈಗೊಂಡ ವಾಸ್ತವಿಕ ಸಮೀಕ್ಷೆಯ ಮೇರೆಗೆ ಅಂದಾಜು 2.92 ಲಕ್ಷ (ದನ ಮತ್ತು ಎಮ್ಮೆ) ಜಾನುವಾರುಗಳಿವೆ. ಲಸಿಕಾ ಅಭಿಯಾನದಲ್ಲಿ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮನೆ ಬಾಗಿಲಿಗೆ ಹೋಗಿ ಕಾಲುಬಾಯಿ ಲಸಿಕೆ ಹಾಕುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಯಲಿ ತಿಳಿಸಿದರು.
3.18 ಲಕ್ಷ ಡೋಸ್ ಲಸಿಕೆ
ಜಿಲ್ಲೆಯಲ್ಲಿ ಈಗಾಗಲೇ 3,18,550 ಡೋಸ್ ಲಸಿಕೆ ದಾಸ್ತಾನಿದ್ದು, ಈ ಲಸಿಕೆಯನ್ನು ತಾಲೂಕಿನಲ್ಲಿರುವ ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ವಿಂಗಡಿಸಿ ಮರು ಹಂಚಿಕೆ ಮಾಡಲಾಗಿದೆ. ಪ್ರತಿ ಜಾನುವಾರುವಿಗೆ ಉಚಿತವಾಗಿ ಲಸಿಕೆ ಮಾಡಿದ ನಂತರ ರೈತರ ವಿವರವನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ತಂತ್ರಾಂಶದಲ್ಲಿ ಅಳವಡಿಸಿ ರೈತರಿಂದ ಒ.ಟಿ.ಪಿ ಪಡೆದುಕೊಳ್ಳುವ ಮುಖಾಂತರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net